ಬಾಗಲಕೋಟೆ: ಜಿಲ್ಲೆಯಲ್ಲಿ ನದಿ ಪಾತ್ರಗಳ ಒಳ ಮತ್ತು ಹೊರ ಹರಿವು ಹೆಚ್ಚಾಗಿದ್ದು, ಕಳೆದ 2019ರಲ್ಲಿ ಸಂಭವಿಸಿದ ಪ್ರವಾಹದ ಅನುಭವವನ್ನು ಆಧಾರವಾಗಿಟ್ಟುಕೊಂಡು ಪ್ರವಾಹವನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಸಕ್ತ ಸಾಲಿನಲ್ಲಿ ಉಂಟಾದ ಹಾನಿಯ ವಿವರ ಹಾಗೂ ಪ್ರವಾಹ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳು ವಿಶೇಷವಾಗಿ ಗ್ರಾಮ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದಿನದ 24 ಗಂಟೆಯಲ್ಲಿ ಜನರ ಜತೆಗೆ ಸಂಪರ್ಕದಲ್ಲಿ ಇದ್ದು, ಸಾರ್ವಜನಿಕರ ಸಮಸ್ಯೆಗೆ ತುರ್ತಾಗಿ ಸ್ಪಂದಿಸುವಂತೆ ಜಿಪಂ ಸಿಇಒ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಜೂನ್ 1ರಿಂದ ಇಲ್ಲಿಯವರೆಗೆ 188 ಗ್ರಾಮಗಳಲ್ಲಿ ಮಳೆಯಿಂದ ಹಾನಿಯಾದಂತಹ ಮನೆಗಳಿಗೆ ಪರಿಹಾರ ವಿತರಿಸಲು ಹಾನಿಯಾದ ಮನೆಗಳನ್ನು ಕೂಲಂಕೂಷವಾಗಿ ಪರಿಶೀಲಿಸಿ ಯಾವುದೇ ಅನರ್ಹ ಫಲಾನುಭವಿಗಳನ್ನು ಸೇರಿಸದೇ ಮತ್ತು ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಸಮೀಕ್ಷೆ ಮಾಡಿ ಸರಕಾರದ ನಿಯಮಾನುಸಾರ ಪರಿಹಾರ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಹಾನಿಯಾದ ಕೃ ಮತ್ತು ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆಯನ್ನು ತಕ್ಷಣ ಮಾಡಿ, ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಬೇಕು. ಜನ ಜಾನುವಾರು, ಜೀವಹಾನಿಯಾದಲ್ಲಿ 24 ಗಂಟೆಯೊಳಗಾಗಿ ಪರಿಹಾರ ಪಾವತಿಸಬೇಕು ಎಂದು ಹೇಳಿದರು. ಪ್ರವಾಹ ಸಂದರ್ಭದಲ್ಲಿ ಸ್ಥಾಪಿಸಲಾದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದ ಜನರಿಗೆ ಒಳ್ಳೆಯ ಪೌಷ್ಟಿಕ ಆಹಾರ ವಿತರಿಸಬೇಕು. ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಹಾನಿಯಾದ ರಸ್ತೆ ಮತ್ತು ಸೇತುವೆಗಳ ವರದಿಯನ್ನು ಪಂಚಾಯತ್ ರಾಜ್ ಎಂಜನಿಯರಿಂಗ್ ವಿಭಾಗದಿಂದ ಮತ್ತು ಲೋಕೋಪಯೋಗಿ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆಸಲ್ಲಿಸಬೇಕು ಎಂದರು.
ಬಾದಾಮಿ- ನೀರಲಕೇರಿಯ ರಸ್ತೆಯ ದುರಸ್ತಿ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಅದೇ ರೀತಿ ಎಲ್ಲೆಲ್ಲಿ ಅತಿಯಾದ ಮಳೆಯಿಂದ ವಿಶೇಷವಾಗಿ ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಹಾನಿಯಾದಲ್ಲಿ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿ, ಅಧಿಕಾರಿಗಳು ಜಿಲ್ಲೆಗೆ ಸಂಬಂಧಪಟ್ಟ ಜಲಾಶಯಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ನೀರಿನ ಒಳಹರಿವು ಮತ್ತು ಹೊರ ಹರಿವಿನ ಸಮನ್ವಯ ಸಾಧಿಸಬೇಕು ಎಂದು ಸೂಚಿಸಿದರು.
ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ವಿಧಾನಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಜಿಲ್ಲಾ ಧಿಕಾರಿ ಪಿ. ಸುನೀಲಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ, ಯಕೆಪಿಯ ಮಹಾವ್ಯವಸ್ಥಾಪಕ ರಾಹುಲ್ ಪಾಂಡೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮುಂತಾದವರು ಉಪಸ್ಥಿತರಿದ್ದರು.