Advertisement

ಪ್ರವಾಹ ಎದುರಿಸಲು ಸನ್ನದರಾಗಿರಿ: ಡಿಸಿ  

11:49 AM May 24, 2022 | Team Udayavani |

ಬೆಳಗಾವಿ: ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರು ಸೋಮವಾರ ಕೃಷ್ಣಾ ನದಿ ತೀರದಲ್ಲಿರುವ, ಈ ಹಿಂದೆ ಪ್ರವಾಹದಿಂದ ಬಾಧಿತಗೊಂಡಿದ್ದ ಚಿಕ್ಕೋಡಿ ಹಾಗೂ ಕಾಗವಾಡ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ನಿರ್ವಹಣೆ ಕುರಿತು ಪರಿಶೀಲಿಸಿದರು.

Advertisement

ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆಗೆ ಭೇಟಿ ನೀಡಿದ ಅವರು, ಇತ್ತೀಚಿನ ಮಳೆಯಿಂದ ಕೃಷ್ಣಾ ನದಿಯಲ್ಲಿ ಉಂಟಾಗಿರುವ ನೀರಿನ ಹರಿವು ಹೆಚ್ಚಳವನ್ನು ವೀಕ್ಷಿಸಿದರು. ನಂತರ ಯಡೂರ, ಇಂಗಳಿ, ಕಾಗವಾಡ ತಾಲೂಕಿನ ಮಂಗಾವತಿ ಹಾಗೂ ಜುಗುಳ ಗ್ರಾಮಗಳಿಗೆ ಭೇಟಿ ನೀಡಿ 2019 ಹಾಗೂ 2021 ರ ಪ್ರವಾಹ ಸಂದರ್ಭದಲ್ಲಿ ಮುಳುಗಡೆಯಾಗಿದ್ದರ ಕುರಿತು ಗ್ರಾಮಸ್ಥರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮುನ್ನೆಚ್ಚರಿಕೆ ಕ್ರಮ: ಮಳೆಗಾಲ ಆರಂಭವಾಗುತ್ತಿದ್ದು, ಮುಂಬರುವ ದಿನಗಳಲ್ಲಿ ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ಮಳೆಯ ಪ್ರಮಾಣದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ಪ್ರವಾಹ ಉಂಟಾದ ಸಂದರ್ಭದಲ್ಲಿ ಜನರು ಹಾಗೂ ಜಾನುವಾರುಗಳ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಈ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಗಿದೆ. ಅದರಂತೆ ಕಾಳಜಿ ಕೇಂದ್ರಗಳನ್ನು ಗುರುತಿಸಬೇಕು. ಜನರ ರಕ್ಷಣೆಗಾಗಿ ಅಗತ್ಯವಿರುವ ಬೋಟ್‌ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.

ಚಿಕ್ಕೋಡಿಯಲ್ಲಿ ಸಾಕಷ್ಟು ಸಂಖ್ಯೆಯ ಬೋಟ್‌ ಗಳಿವೆ. ಆದಾಗ್ಯೂ ಹೆಚ್ಚುವರಿ ಬೋಟ್‌ ಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಹಳೆ ಬೋಟ್‌ ಗಳ ದುರಸ್ತಿ ಮಾಡಿಸಿಟ್ಟುಕೊಳ್ಳಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಜೊತೆಗೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ನದಿ ತೀರದ ಗ್ರಾಮಸ್ಥರು ಅಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರವಾಹದಿಂದ ಪೀಡಿತಗೊಳ್ಳುವ ನದಿತೀರದ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಮಳೆಯ ಪ್ರಮಾಣ, ನದಿ ಹರಿವು ಹಾಗೂ ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಮಹಾರಾಷ್ಟ್ರದ ಜತೆ ಸಮನ್ವಯ ಸಾಧಿಸಲು ಅನುಕೂಲವಾಗುವಂತೆ ಪೂರ್ವಭಾವಿಯಾಗಿ ಜಿಲ್ಲೆಯ ನೀರಾವರಿ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next