ಬೀದರ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದಿಂದ ಗುಡಿ ಕೈಗಾರಿಕೆಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಯೋಜನೆಯಿದೆ ಎಂದು ಪ್ರಾಧಿಕಾರದ ಅಧ್ಯಕ್ಷೆ ಕೆ. ರತ್ನಪ್ರಭ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್
ಎಲ್‌ಎಂ) ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೈಗಾರಿಕಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕೌಶಲ್ಯ ವೃದ್ಧಿ, ಯುವಜನತೆ ಉತ್ತಮ ಬದುಕು ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಧಿಕಾರವು ನಿರುದ್ಯೋಗಿ ಯುವಕ ಯುವತಿಯರಿಗೆ ಸೂಕ್ತ ತರಬೇತಿ ನೀಡಿ ಉದ್ಯೋಗ ಕಲ್ಪಿಸುತ್ತಿದೆ ಎಂದು ಹೇಳಿದರು.
ಪ್ರತಿ ತಾಲೂಕಿನ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಸಭೆಗಳ ಮೂಲಕ 500 ಜನರನ್ನು ಗುರುತಿಸಿ ಅವರಿಗೆ ಅಗತ್ಯ ಕೌಶಲ್ಯ ತರಬೇತಿ ನೀಡುವ ಯೋಜನೆಯಿದೆ. ನಿರುದ್ಯೋಗಿಗಳಿಗೆ ಹೋಟೆಲ್, ಕ್ಯಾಂಟೀನ್ ನಡೆಸುವ ತರಬೇತಿ ನೀಡುವ ಉದ್ದೇಶವಿದೆ ಎಂದು ಹೇಳಿದರು.
ಸಂಜೀವಿನಿ ಅಭಿಯಾನದ ನಿರ್ದೇಶಕಿ ಬಿ.ಆರ್. ಮಮತಾ ಮಾತನಾಡಿ, ಜೀವನೋಪಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಬಡತನ ರೇಖೆಗಿಂತ ಕೆಳಗಿರುವ, ವಿಕಲಚೇತನರು, ಅಲ್ಪಸಂಖ್ಯಾತರ ಅಭ್ಯರ್ಥಿಗಳನ್ನು ಗುರುತಿಸಿ 10 ಅಥವಾ 5 ಜನರ ಗುಂಪು ಮಾಡಿ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೊಟ್ಟಿ ತಯಾರಿಕೆ, ಪೇಪರ್ ಪ್ಲೇಟ್, ಮೇಣದ ಬತ್ತಿ, ಕರಕುಶಲ ವಸ್ತುಗಳ ತಯಾರಿಕೆ ಸೇರಿದಂತೆ ವಿವಿಧ ಗುಡಿ ಕೈಗಾರಿಕೆಗಳನ್ನು ನಡೆಸುತ್ತಿರುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಜಿಪಂ ಉಪ ಕಾರ್ಯದರ್ಶಿ ಸೂರ್ಯಕಾಂತ. ಎಸ್, ತಾಪಂ, ನಗರಸಭೆ, ಗ್ರಾಪಂ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಹುಮನಾಬಾದ ಜಿಟಿಟಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.