ಬೀದರ: ನಗರದ ಪಶು ವಿವಿ ಆವರಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಶು ಮೇಳ ಸಿದ್ಧತೆ ಕುರಿತಂತೆ ಬುಧವಾರ ನಗರದ ಡಿಸಿ ಕಚೇರಿ ಸಭಾಂಗಣಲ್ಲಿ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಅವರ ಅಧ್ಯಕ್ಷತೆಯಲ್ಲಿ ಮತ್ತೂಂದು ಸುತ್ತಿನ ಸಿದ್ಧತಾ ಸಭೆ ನಡೆಯಿತು.
ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಿದ್ಧತೆಗಳು ಚುರುಕಾಗಿ ನಡೆಯಬೇಕು. ವಿಶೇಷವಾಗಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಪ್ರಚಾರ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಅಧಿಕಾರಿಗಳು, ರೈತರಿಗೆ ವಾಸ್ತವ್ಯಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಮೇಳದಲ್ಲಿ ಪಾಲ್ಗೊಳ್ಳುವ ಜಾನುವಾರುಗಳಿಗೆ ಮೇವು, ನೀರಿನ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ರೀತಿಯ ಲೋಪಗಳಿಗೆ ಆಸ್ಪದ ನೀಡದಂತೆ ಎಲ್ಲ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಿಂದ ಹಾಕಲಾಗುವ ಮಳಿಗೆ ಸಿದ್ಧತೆ ಮಾಡಿಕೊಳ್ಳಬೇಕು. ಆಹ್ವಾನ ಪತ್ರಿಕೆಗಳನ್ನು ಮುಂಚಿತವಾಗಿ ಮುದ್ರಿಸಿ ಒಂದು ವಾರಕ್ಕಿಂತ ಮುಂಚಿತವಾಗಿ ಅತಿಥಿಗಳಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಿದ್ಧತೆ ಕುರಿತು ವಿವರಿಸಿದ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಗೋವಿಂದರಾವ, ಮೇಳಕ್ಕೆ 10,000 ಜನರು ಸೇರುವ ನಿರೀಕ್ಷೆಯಿದ್ದು, ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಹೊರಗಡೆಯಿಂದ ಬರುವ ಜನರಿಗೆ ವಾಸ್ತವ್ಯಕ್ಕೆ ಅಗತ್ಯ ಏರ್ಪಾಡು ಮಾಡಿಕೊಳ್ಳಲಾಗಿದೆ. ಪ್ರದರ್ಶನದಲ್ಲಿ ಪಾಲ್ಗೊಳ್ಳಲು ತರಲಾಗುವ ಜಾನುವಾರುಗಳಿಗೆ ಮೇವು,ನೀರಿನ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಮತ್ತು ರೈತರಿಗೆ ಊಟದ ವ್ಯವಸ್ಥೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.