ದೇವನಹಳ್ಳಿ: ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಮಾಹಿತಿ ಕಲೆ ಹಾಕಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏ.25ರಿಂದ ಮೇ 12ರವರೆಗೆ ಸಮೀಕ್ಷೆ ಕಾರ್ಯ ಕೈಗೊಳ್ಳಲಿದ್ದು, ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆ ಕೈಗೊಳ್ಳುವ ಸಂಬಂಧ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿಯನ್ನು ನಿಯಂತ್ರಿಸುವುದು ಈ ಸಮೀಕ್ಷೆ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಪ್ರತಿ ಮೂರು ವರ್ಷಕ್ಕೊಮ್ಮೆ, ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಯಬೇಕಿದೆ. ಈ ಹಿಂದೆ 2018-19ನೇ ಸಾಲಿನಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಬಾಲ ಕಾರ್ಮಿಕರು ಹೆಚ್ಚಾಗಿ ಕಂಡುಬರುವ ಪ್ರದೇಶಗಳಿಗೆ ಭೇಟಿ ನೀಡಿ, 14 ವರ್ಷ ಮೇಲ್ಪಟ್ಟ ಮತ್ತು 18 ವರ್ಷದೊಳಗಿನ ಕಿಶೋರ ಕಾರ್ಮಿಕರು ಕಲ್ಲಿನ ಕ್ವಾರಿ, ಗಣಿಗಾರಿಕೆ, ಸ್ಫೋಟಕ ಮತ್ತು ಅಪಾಯಕಾರಿ ಕಾರ್ಯ ಪ್ರಕ್ರಿಯೆಗಳ ಸ್ಥಳಗಳಲ್ಲಿ ಸಮೀಕ್ಷೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ತಪಾಸಣೆ ಕೈಗೊಂಡು ವರದಿ ನೀಡಿ: ಸ್ವಯಂ ಸೇವಾ ಸಂಸ್ಥೆಯವರು ಸಮೀಕ್ಷೆ ಮಾಹಿತಿಯನ್ನು ಕ್ರೋಢೀಕರಿಸಿ ಸಂಪೂರ್ಣ ವರದಿಯನ್ನು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ಮೇ 18ರೊಳಗೆ ಸಲ್ಲಿಸಬೇಕು. ತಾಲೂಕುಗಳಲ್ಲಿ ಸಮೀಕ್ಷೆಯನ್ನು ನಡೆಸುವ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಕಾರ್ಮಿಕ ನಿರೀಕ್ಷಕರು ನಿರಂತರ ಸಂಪರ್ಕದಲ್ಲಿದ್ದು, ಸಮೀಕ್ಷೆ ಪೂರ್ಣಗೊಳಿಸಿದ ನಂತರ ಬಾಲ ಕಾರ್ಮಿಕರ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ)ಕಾಯ್ದೆ
1986 ಮತ್ತು ತಿದ್ದುಪಡಿ ಕಾಯ್ದೆ 2016 ರಡಿ ನೇಮಕಗೊಂಡ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತಪಾಸಣೆ ಕೈಗೊಂಡು ವರದಿ ನೀಡಬೇಕು ಎಂದರು.
ಪ್ರಕರಣ ದಾಖಲಿಸಿ: ಕೋವಿಡ್ ಸಂದರ್ಭದಲ್ಲಿ ಶಾಲೆಗಳು ಮುಚ್ಚಿದ್ದರಿಂದ ಪರಿಸ್ಥಿತಿ ಒತ್ತಡಕ್ಕೆ ಸಿಲುಕಿ ಮಕ್ಕಳು ಅನಿವಾರ್ಯವಾಗಿ ದುಡಿಮೆಗೆ ಹೋಗಿರುವ ಸಾಧ್ಯತೆಗಳಿವೆ. ಬಾಲಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆಯಲ್ಲಿ 14 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿಯಲ್ಲದ ಕ್ಷೇತ್ರಗಳಲ್ಲಿ ಕಂಡುಬಂದಲ್ಲಿ ಸದರಿ ಮಾಲೀಕರ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕ್ರಮ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಶಿಕ್ಷಣ ಇಲಾಖೆ ನೀಡಬೇಕು ಎಂದು ಹೇಳಿದರು.
ಜಾಗೃತಿ ಮೂಡಿಸಿ: ಕಾನೂನು ಅರಿವು ಕಾರ್ಯಕ್ರಮ, ಜಾಥಾ ಹಾಗೂ ಬೀದಿ ನಾಟಕ ಆಯೋಜನೆ. ಗೋಡೆಬರಹ ಹಾಗೂ ಕರಪತ್ರ ಹಂಚುವುದು, ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಕೆ ಮೂಲಕ ಜಾಗೃತಿಗೊಳಿಸುವ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಒಟ್ಟಾರೆಯಾಗಿ ಬಾಲಕಾರ್ಮಿಕ ಕಾಯ್ದೆಯಡಿ ಕಲಂ 16 ಮತ್ತು 17ರ ಅಡಿಯಲ್ಲಿ ನೇಮಕಗೊಂಡ ಎಲ್ಲಾ ವಿವಿಧ ಇಲಾಖೆಗಳ ಅಧಿಕಾರಿಗಳು ಸಮೀಕ್ಷೆಗೆ ಸಹಕಾರ ನೀಡಿ ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ಕಲ್ಯಾಣಾ ಸಮಿತಿ ಅಧ್ಯಕ್ಷ ರಾಮು ಜೋಗಿಹಳ್ಳಿ, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಟಾರಾವ್. ಎಸ್., ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್. ಕೃಷ್ಣಪ್ಪ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಕಾರ್ಮಿಕ ನಿರೀಕ್ಷಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.