ನಾಯಕನಹಟ್ಟಿ: ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಬೃಹತ್ ಪ್ರತಿಭಟನೆಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಎಂ.ವೈ.ಟಿ. ಸ್ವಾಮಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಸ್ಲಂ ಮೋರ್ಚಾ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಆರು ತಾಲೂಕುಗಳಲ್ಲಿ ಐದು ಶಾಶ್ವತ ಬರಪೀಡಿತ ತಾಲೂಕುಗಳಾಗಿವೆ. ಜಿಲ್ಲೆಗೆ ಯಾವುದೇ ಶಾಶ್ವತ ಕುಡಿಯುವ ನೀರಿನ ಸೌಲಭ್ಯಗಳಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಸಮ್ಮಿಶ್ರ ಸರಕಾರ ಹೆಚ್ಚಿನ ಪ್ರಮಾಣದಲ್ಲಿ ಹಣ ಬಿಡುಗಡೆ ಮಾಡಿಲ್ಲ. ಇದ ಬಗ್ಗೆ ಕಡಿಮೆ ಅನುದಾನ ನೀಡುತ್ತಿರುವುದರಿಂದ ಯೋಜನೆ ನನೆಗುದಿಗೆ ಬಿದ್ದಿದೆ ಎಂದರು.
2500 ಕೋಟಿ ರೂ. ವೆಚ್ಚದ ಕಾಮಗಾರಿಗೆ ಕೇವಲ 200 ಕೋಟಿ ರೂ. ನೀಡಿದೆ. ಪ್ರತಿ ವರ್ಷ ಬಜೆಟ್‌ನಲ್ಲಿ 500 ರಿಂದ ಒಂದು ಸಾವಿರ ಕೋಟಿ ರೂ.ಗಳನ್ನು ಇದಕ್ಕಾಗಿ ಮೀಸಲಿಡಬೇಕು. ಸರಕಾರದ ಮಂತ್ರಿಗಳು, ಶಾಸಕರು ಈ ಬೃಹತ್ ಯೋಜನೆಯ ಬಗ್ಗೆ ನಿರಂತರ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿ ಶೀಘ್ರದಲ್ಲಿ ಬೃಹತ್ ಮೆರವಣಿಗೆ ಹಾಗೂ ಒತ್ತಾಯದ ಕಾರ್ಯಕ್ರಮ ಯೋಜಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಬೆಂಗಳೂರಿನಲ್ಲಿ ಏರ್ಪಡಿಸುವ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಸ್ಲಂ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್. ಭೀಮರಾಜ್ ಮಾತನಾಡಿ, ಸ್ಲಂ ಪ್ರದೇಶಗಳಲ್ಲಿ ಎಲ್ಲ ಜಾತಿ,ಧರ್ಮಗಳ ಅತ್ಯಂತ ಬಡವರು ಹಾಗೂ ಹಿಂದುಳಿದವರು ವಾಸವಾಗಿದ್ದಾರೆ. ಅಂಥಹ ಪ್ರದೇಶಗಳಲ್ಲಿ ಕುಡಿಯುವ ನೀರು, ಆರೋಗ್ಯ, ವಿದ್ಯುತ್ ಸೇರಿದಂತೆ ವಿವಿಧ ಮೂಲ ಸೌಲಭ್ಯಗಳನ್ನು ಒದಗಿಸುವುದಕ್ಕೆ ಸರಕಾರ ಗಮನ ಹರಿಸುತ್ತಿಲ್ಲ. ಕೊಳಚೆ ಪ್ರದೇಶದಲ್ಲಿ ವಾಸಿಸುವ ಜನರನ್ನು ಗುರುತಿಸಿ ಅವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಪಾಧ್ಯಕ್ಷ ಬಿ.ಆರ್. ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಪಿ.ಶಿವಣ್ಣ, ಮಂಡಲ ಅಧ್ಯಕ್ಷ ಎನ್.ಎಂ. ತ್ರಿಶುಲ್, ತಿಪ್ಪೇಸ್ವಾಮಿ ಮತ್ತಿತರರಿದ್ದರು.