Advertisement

ಸೌಲಭ್ಯ ಒದಗಿಸಲು ಕ್ರಮ ವಹಿಸಿ

10:47 PM May 07, 2021 | Team Udayavani |

ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡು ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಕಲ್ಪಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಕೋವಿಡ್‌ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಉನ್ನತಮಟ್ಟದ ಸಭೆಯನ್ನು ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 25 ಸಕ್ಕರೆ ಕಾರ್ಖಾನೆಗಳಿವೆ. ಅದರ ಪ್ರಯೋಜನ ಪಡೆಯಬೇಕು ಎಂದರು.

ಮಹಾರಾಷ್ಟÅದಲ್ಲಿ ಇಥೆನಾಲ್‌ ಘಟಕ ಹೊಂದಿರುವ ಸಕ್ಕರೆ ಕಾರ್ಖಾನೆಗಳು ಆಕ್ಸಿಜನ್‌ ಉತ್ಪಾದಿಸಿ ಸರಬರಾಜು ಮಾಡುತ್ತಿವೆ. ಈ ಬಗ್ಗೆ ಪರಿಶೀಲಿಸಿ ನಮ್ಮಲ್ಲಿಯೂ ಅದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಹೇಳಿದರು. ಬಿಮ್ಸ್‌ ಗೆ ಇನ್ನೊಂದು ಆಕ್ಸಿಜನ್‌ ಸಂಗ್ರಹ ಘಟಕ ಸ್ಥಾಪಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದ ಅವರು, ಓ.ಎನ್‌.ಜಿ.ಸಿ ಆಕ್ಸಿಜನ್‌ ಘಟಕವನ್ನು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಲು ಮನವಿ ಮಾಡಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಸ್ಥಳ ಗುರುತಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕೂಡಲೇ ಪತ್ರ ಬರೆಯುವಂತೆ ಸೂಚನೆ ನೀಡಿದರು.

ಕೆ.ಎಂ.ಎಫ್‌ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರು 200 ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಇದರ ಪ್ರಯೋಜನ ಪಡೆಯಬೇಕು. ಜಿಲ್ಲೆಯಲ್ಲಿ ಕೆಲವು ಕಡೆಗಳಲ್ಲಿ ರೋಗಿಗಳಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಆಕ್ಸಿಜನ್‌ ಬಳಕೆ ಮಾಡಲಾಗುತ್ತಿದೆ ಎಂದು ದೂರುಗಳಿವೆ. ಇದರ ಬಗ್ಗೆ ಆಸ್ಪತ್ರೆಗಳಲ್ಲಿ ವೈದ್ಯರು ನಿಗಾ ವಹಿಸಬೇಕು. ಆಕ್ಸಿಜನ್‌ ಕೊರತೆಯಾಗದಂತೆ ಹೆಚ್ಚುವರಿ ಟ್ಯಾಂಕರ್‌ ಅಥವಾ ಚಾಲಕರನ್ನು ನಿಯೋಜಿಸಲು ಸೂಚನೆ ನೀಡಿದರು.

ಗೋಕಾಕ, ಸವದತ್ತಿ ಹಾಗೂ ಬೆಳಗಾವಿ ಸೇರಿದಂತೆ ಕೆಲ ತಾಲೂಕುಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಚಿವರು ಇದರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು. ಜಿಲ್ಲೆಯಲ್ಲಿ ಕೋವಿಡ್‌ ತಪಾಸಣೆಗೆ ಅಗತ್ಯವಿರುವ ಪ್ರಯೋಗಾಲಯದ ಸ್ಥಾಪನೆಗೆ ಪ್ರಸ್ತಾವವನ್ನು ಕಳಿಸಿದರೆ ಮಂಜೂರಾತಿ ಒದಗಿಸಲಾಗುವುದು ಎಂದು ಹೇಳಿದರು.

Advertisement

ಇನ್ನು ಕೆಲವು ದಿನಗಳಲ್ಲಿ ರೆಮ್‌ ಡಿಸಿವಿಯರ್‌ ಚುಚ್ಚುಮದ್ದು ಬೆಳಗಾವಿಯಲ್ಲಿ ಉತ್ಪಾದನೆಯಾಗಲಿದ್ದು, ಇದರಿಂದ ಕೊರತೆ ನೀಗಲಿದೆ. ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಷಯದಲ್ಲಿ ಯಾವುದೇ ಅವಶ್ಯಕತೆಯಿದ್ದರೆ ತಕ್ಷಣವೇ ತಮ್ಮ ಗಮನಕ್ಕೆ ತರುವಂತೆ ಸೂಚಿಸಿದರು.

ಸಮಿತಿ ರಚನೆಗೆ ಸಲಹೆ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ ಕತ್ತಿ ಮಾತನಾಡಿ, ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಬೆಡ್‌ ಗಳ ಹಂಚಿಕೆಗೆ ಒಂದು ಸಮಿತಿ ರಚಿಸಬೇಕು. ಅದರ ಮೂಲಕವೇ ಬೆಡ್‌ ಹಂಚಿಕೆ ಮಾಡಬೇಕು ಎಂದು ಹೇಳಿದರು.

ಶಾಸಕ ಅನಿಲ ಬೆನಕೆ ಮಾತನಾಡಿ, ಆಂಬ್ಯುಲೆನ್ಸ್‌ ಸೇವೆ ಒದಗಿಸಲು ಸಾವಿರಾರು ರೂಪಾಯಿ ಹಣವನ್ನು ಅಕ್ರಮವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ತಾಲೂಕು ಮಟ್ಟದಲ್ಲಿ ಸೋಂಕಿತರ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಪ್ರತಿ ತಾಲೂಕಿನಲ್ಲಿ ಕನಿಷ್ಠ 100 ಹಾಸಿಗೆಗಳ ಆಸ್ಪತ್ರೆ ಆರಂಭಿಸಬೇಕು. ಇದರಿಂದ ಜಿಲ್ಲಾ ಕೇಂದ್ರದ ಮೇಲೆ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದರು.

ನೂತನ ಸಂಸದೆ ಮಂಗಲಾ ಅಂಗಡಿ ಮಾತನಾಡಿ, ನಗರದ ಎಲ್ಲ ಪ್ರದೇಶದಲ್ಲಿ ಪ್ಯೂಮಿಗೇಷನ್‌ ಮಾಡುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊರೊನಾ ಸೋಂಕಿನ ಪ್ರಮಾಣದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ|ಕೆ ಹರೀಶಕುಮಾರ ಅವರು, ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಸದ್ಯಕ್ಕೆ ಸರಾಸರಿ ಶೇ.20 ರಷ್ಟಿದೆ. ಜಿಲ್ಲೆಯ ಸರಕಾರಿ- ಖಾಸಗಿ ಆಸ್ಪತ್ರೆಗಳಲ್ಲಿ 1343 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 270 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆಕ್ಸಿಜನ್‌ ಸಂಗ್ರಹ ಸಾಮರ್ಥ್ಯ ಚೆನ್ನಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೂರೈಸುವ ಅಗತ್ಯವಿದೆ ಎಂದರು

ಬಿಮ್ಸ ನಿರ್ದೇಶಕ ಡಾ ವಿನಯ ದಾಸ್ತಿಕೊಪ್ಪ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಹೊಸದಾಗಿ 500 ಲೀಟರ್‌ ಸಾಮರ್ಥ್ಯದ ಒಂದು ಘಟಕವನ್ನು ಸ್ಥಾಪಿಸಲು ಮಂಜೂರಾತಿ ದೊರೆತಿದ್ದು 20 ದಿನಗಳಲ್ಲಿ ಇದು ಕಾರ್ಯಾರಂಭಿಸಲಿದೆ. ಈಗ ಬಿಮ್ಸ್‌ದಲ್ಲಿರುವ ಸಿಬ್ಬಂದಿ ಮೂರು ಪಾಳಿಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಇನ್ನಷ್ಟು ಸಿಬ್ಬಂದಿಗಳ ಅಗತ್ಯವಿದೆ ಎಂದರು. ಸಭೆಯಲ್ಲಿ ಉತ್ತರವಲಯ ಐಜಿಪಿ ರಾಘವೇಂದ್ರ ಸುಹಾಸ್‌, ಬೆಳಗಾವಿ ಪೊಲೀಸ್‌ ಆಯುಕ್ತ ಡಾ.ಕೆ. ತ್ಯಾಗರಾಜನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ¾ಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ್‌, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next