Advertisement

ಅಧಿಕಾರಿಗಳಿಗೆ ಗ್ರಾಮ ವಾಸ್ತವ್ಯ ಕಡ್ಡಾಯ

04:32 PM Oct 11, 2018 | |

ಬೆಳಗಾವಿ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆ. ಇದನ್ನು ಖಚಿತಪಡಿಸುವುದರ ಜತೆಗೆ ಜನರ ಸಮಸ್ಯೆಗಳನ್ನು ಅರಿಯಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಡ್ಡಾಯವಾಗಿ ಪ್ರತಿ ತಿಂಗಳು ಒಂದು ತಾಲೂಕು ಪ್ರವಾಸ ಕೈಗೊಳ್ಳಬೇಕು ಎಂದು ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳ ಗ್ರಾಮ ವಾಸ್ತವ್ಯ, ಸಾರ್ವಜನಿಕ ಸಂಪರ್ಕ ಸಭೆ ಹಾಗೂ ತಾಲೂಕು ಭೇಟಿಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆದ್ದರಿಂದ ಪ್ರತಿ ತಿಂಗಳು ತಾಲೂಕುಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಪರಿಹರಿಸಲು ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ, ಕೃಷಿ, ತೋಟಗಾರಿಕೆ, ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಶಿಕ್ಷಣ, ಆರೋಗ್ಯ, ಆಹಾರ ಮತ್ತು ನಾಗರಿಕ ಸರಬರಾಜು, ಸ್ಥಳೀಯ ನಗರ ಸಂಸ್ಥೆಗಳು ಸೇರಿದಂತೆ ಪ್ರತಿ ಇಲಾಖೆಯ ಅಧಿಕಾರಿ ತಮ್ಮ ಇಲಾಖೆಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಒಂದು ಇಲಾಖೆಯು ಯೋಜನೆಯ ಅನುಷ್ಠಾನದಲ್ಲಿ ಹಿಂದುಳಿದರೆ ಅಥವಾ ನಿರ್ಲಕ್ಷ್ಯ ತೋರಿಸಿದರೆ ಅದರ ಪರಿಣಾಮ ಇಡೀ ಜಿಲ್ಲಾಡಳಿತದ ಮೇಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ಇಲಾಖೆಯ ಅಧಿಕಾರಿಗಳು ಶಿಸ್ತು ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮೇಘಣ್ಣವರ ಸೂಚನೆ ನೀಡಿದರು. ಪ್ರಕರಣಗಳ ವಿಲೇವಾರಿ: ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರ ನ್ಯಾಯಾಲಯದಲ್ಲಿ ಐದು ವರ್ಷ ಮೇಲ್ಪಟ್ಟು ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಜಿಲ್ಲೆಯಲ್ಲಿ ಒಟ್ಟಾರೆ 512 ಪ್ರಕರಣಗಳು ಐದು ವರ್ಷಕ್ಕೂ ಮೇಲ್ಪಟ್ಟು ಬಾಕಿ ಉಳಿದಿದ್ದು ಆದ್ಯತೆ ಮೇರೆಗೆ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದರು.

ವಸತಿರಹಿತರಿಗೆ ನಿವೇಶನ ಅಥವಾ ಮನೆ ಒದಗಿಸಲು ಸರ್ಕಾರಿ ಭೂಮಿ ಇದ್ದರೆ ತಕ್ಷಣವೇ ಒದಗಿಸಬೇಕು. ಒಂದು ವೇಳೆ ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಲು ಅನುಕೂಲವಾಗುವಂತೆ ನಿಯಮಾವಳಿ ಸಡಿಸಲಿಸಲಾಗಿದೆ. ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕಾರ್ಯಪ್ರವೃತ್ತರಾಗಿ ವಸತಿರಹಿತರಿಗೆ ಸೌಲಭ್ಯ ಕಲ್ಪಿಸಬೇಕು ಎಂದರು.

Advertisement

ಪ್ರಕೃತಿ ವಿಕೋಪದಿಂದ ಜನರು ಅಥವಾ ಜಾನುವಾರುಗಳ ಜೀವಹಾನಿಯಾದರೆ ಮನೆಗಳು ಕುಸಿದರೆ ತಕ್ಷಣವೇ ಪರಿಹಾರ ಒದಗಿಸಬೇಕು. ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರಕೃತಿ ವಿಕೋಪ ಸಂಭವಿಸಿದ ಬಳಿಕ ಒಟ್ಟಾರೆ 150 ಮನೆಹಾನಿಗೆ ಸಂಬಂಧಿಸಿದಂತೆ ಪರಿಹಾರ ವಿತರಣೆ ಬಾಕಿ ಉಳಿದಿದ್ದು, ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯ ಎಲ್ಲ 33 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಡ್ಡಾಯವಾಗಿದ್ದು, ಇದಕ್ಕೆ ಸರ್ಕಾರದ ಬಂಜರು ಭೂಮಿ ಅಥವಾ ಗಾಯರಾಣ ಭೂಮಿ ಒದಗಿಸಬೇಕು. ಇಲ್ಲದಿದ್ದರೆ ಖಾಸಗಿ ಭೂಮಿ ಖರೀದಿ ಅಥವಾ ಸ್ವಾಧೀನಪಡಿಸಿಕೊಂಡು ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಬೂದೆಪ್ಪ ಎಚ್‌.ಬಿ., ಡಿಸಿಪಿ ಬಿ.ಎಫ್‌.ನಂದಗಾವಿ ಉಪಸ್ಥಿತರಿದ್ದರು.

ಈ ತಿಂಗಳಲ್ಲಿ ಗ್ರಾಮವಾಸ್ತವ್ಯ
ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿ, ಸರ್ಕಾರದ ನಿರ್ದೇಶನದ ಪ್ರಕಾರ ಅಕ್ಟೋಬರ್‌ನಲ್ಲಿ ಜಿಲ್ಲೆಯ ಒಂದು ಹೋಬಳಿ ಕೇಂದ್ರದಲ್ಲಿ ಗ್ರಾಮ ವಾಸ್ತವ್ಯ ಮಾಡಲು ನಿರ್ಧರಿಸಲಾಗಿದೆ. ಈ ವೇಳೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಅಲ್ಲಿಯೇ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಇದಲ್ಲದೆ ಅಕ್ಟೋಬರ್‌ ತಿಂಗಳಲ್ಲಿ ಒಂದು ತಾಲೂಕು ಕೇಂದ್ರಕ್ಕೂ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮತ್ತು ಸಾರ್ವಜನಿಕ ಸಂಪರ್ಕ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಧಿಕಾರಿಗಳು ಸಹ ತಮ್ಮ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಶ್ರಮಿಸಬೇಕು. ಕಾಮಗಾರಿ ಅನುಷ್ಠಾನ ಅಥವಾ ಸೌಲಭ್ಯ ವಿತರಣೆಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಯಾವುದೇ ಸಂದರ್ಭದಲ್ಲಿಯೂ ತಮ್ಮನ್ನು ಇಲ್ಲವೇ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next