ಬೆಳಗಾವಿ: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ದ ನೇತೃತ್ವದಲ್ಲಿ ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ರೈತರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡರು.
ಮಧ್ಯಾಹ್ನ ಸುಮಾರು 12 ಗಂಟೆಗೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಧರಣಿ ನಡೆಸಿದ ಭಾರತೀಯ ಕೃಷಿಕ ಸಮಾಜ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಸುಮಾರು 50 ಜನ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರಿಂದ ಪ್ರತಿಭಟನೆ ಒಂದು ತಾಸಿನೊಳಗೆ ಮುಕ್ತಾಯ ಕಂಡಿತು.
ರೈತರನ್ನು ಬಂಧಿಸಿದ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಇದಕ್ಕೂ ಮುನ್ನ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ವಿಜಯಪುರ ರೈತರಿಂದ ಸಿಂದಗಿ ಕ್ರಾಸ್ ಹೆದ್ದಾರಿ ತಡೆದು ಪ್ರತಿಭಟನೆ
ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ತಕ್ಷಣ ಹಿಂದೆ ಪಡೆಯುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅಖಿಲಾ ಪಠಾಣ, ಕರ್ನಾಟಕ ರಾಜ್ಯ ರೈತ ಸಂಘದ ಜಯಶ್ರೀ ಗುರಣ್ಣವರ ಪಾಲ್ಗೊಂಡಿದ್ದರು.