ಬೆಳಗಾವಿ: ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೃಷ್ಣಾ ಮತ್ತು ದೂದಗಂಗಾ ನದಿಗಳಿಂದ 2.50 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೃಷ್ಣಾ, ಘಟಪ್ರಭಾ, ದೂಧಗಂಗಾ, ವೇದಗಂಗಾ, ಹಿರಣ್ಯಕೇಶಿ ಮತ್ತು ಮಲಪ್ರಭಾ ನದಿಗಳಲ್ಲಿ ಪ್ರವಾಹ ಪರಿಸ್ಥಿತಿಯಿದ್ದು, ಜಿಲ್ಲೆಯಲ್ಲಿ 40 ಸೇತುವೆಗಳು ಮುಳುಗಡೆ ರಸ್ತೆ ಸಂಪರ್ಕ ಕಡಿತವಾಗಿದೆ.
ನದಿಯ ಪಾತ್ರದ ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಪ್ರವಾಹ ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸಿದರು. ಪೊಲೀಸ್ ಇಲಾಖೆ ದ ಸಿಬ್ಬಂದಿಗಳು ನೀರು ಹರಿಯುವಂತೆ ಮಾಡಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಸಾವಂತವಾಡಿ ಅರಣ್ಯ ಪ್ರದೇಶದಲ್ಲಿ ಸಹ ಧಾರಾಕಾರ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿದೆ. ಈಗ ಲಭ್ಯವಾದ ಮಾಹಿತಿಯಂತೆ ಘಟಪ್ರಭಾ ನದಿಯ ಮೂಲಕ ಜಲಾಶಯಕ್ಕೆ 43 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದೆ.
ಹಿಡಕಲ್ ಜಲಾಶಯ ಬಹುತೇಕ ತುಂಬುವ ಹಂತಕ್ಕೆ ಬಂದಿದ್ದು ಇದರಿಂದ ಜಲಾಶಯದ ಮೂಲಕ ನದಿಗೆ 38 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದ್ದು ಗೋಕಾಕ ನಗರದ ನದಿ ಪಾತ್ರದ ಬಡಾವಣೆಗಳು ಸಂಪೂರ್ಣ ಜಲಾವೃತವಾಗಿವೆ.
ಖಾನಾಪುರ ತಾಲೂಕಿನ ಕಣಕುಂಬಿ ಮತ್ತು ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಸಹ ಭಾರೀ ಮಳೆ ಬೀಳುತ್ತಿದ್ದು ಇದರಿಂದ ಮಲಪ್ರಭಾ ನದಿಯ ಮೂಲಕ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದೆ.
ಹಿರಣ್ಯಕೇಶಿ ನದಿಯ ಪ್ರವಾಹದಿಂದ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಶಂಕರಲಿಂಗೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದೆ.