ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ, ಕಾಳಮ್ಮವಾಡಿ ಜಲಾನಯನ ಪ್ರದೇಶಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ಘಟಪ್ರಭಾ ದೂದಗಂಗಾ, ಹಿರಣ್ಯಕೇಶಿ ಹಾಗೂ ಮಲಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಿದೆ.
ನದಿಗಳು ತುಂಬಿ ಹರಿಯುತ್ತಿರುವದರಿಂದ ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ಕೆಳಮಟ್ಟದ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದ ರಸ್ತೆ ಸಂಪರ್ಕ ಕಡಿತವಾಗಿದೆ.
ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು ಇದರಿಂದ ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್ ಗೂ ಅಧಿಕ ನೀರು ಹರಿದು ಬರುತ್ತಿದೆ.
ಸಾವಂತವಾಡಿ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ 31 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದ್ದು ಒಂದೇ ದಿನ ಜಲಾಶಯ ಮಟ್ಟದಲ್ಲಿ ನಾಲ್ಕು ಅಡಿ ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2158 ಅಡಿ ನೀರು ಸಂಗ್ರಹವಾಗಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಮತ್ತು ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು ಮಲಪ್ರಭಾ ನದಿಯ ಮೂಲಕ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದೆ. ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2063 ಅಡಿ ನೀರು ಸಂಗ್ರಹವಾಗಿದೆ.
ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.