ಬೆಳಗಾವಿ: ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ಆದ್ದರಿಂದ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು.
ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು, ಯೋಜನೆಗಳು ಮತ್ತು ಜಿಲ್ಲೆಯ ಗಡಿ ಭಾಗಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಘೋಷಣೆ ಮಾಡಿದರು.
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿಶೇಷ ಅನುದಾನ ನೀಡಬೇಕು ಎಂಬುದು ಇಲ್ಲಿನ ಜನರ ಹಾಗೂ ಕನ್ನಡಪರ ಸಂಘಟನೆಗಳ ಬಹುದಿನಗಳ ಬೇಡಿಕೆಯಾಗಿದೆ. ಇತ್ತೀಚಿನ ಕನ್ನಡ ರಾಜ್ಯೋತ್ಸವದಲ್ಲಿ ಮೂರು ಲಕ್ಷ ಜನರು ಸ್ವಯಂಪ್ರೇರಣೆಯಿಂದ ಸೇರಿದ್ದರು. ಆದ್ದರಿಂದ ಪ್ರಾಧಿಕಾರದ ವತಿಯಿಂದ ನೆರವು ನೀಡುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆಯಲ್ಲಿ ವಿನಂತಿಸಿದರು.
ಇದಕ್ಕೆ ತಕ್ಷಣವೇ ಸ್ಪಂದಿಸಿದ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ್ ಅವರು ಪ್ರಾಧಿಕಾರದಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ನೀಡುವುದಾಗಿ ಸಭೆಯಲ್ಲಿಯೇ ಘೋಷಿಸಿದರು.
ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 2011-12 ರಿಂದ ಇಲ್ಲಿಯವರೆಗೆ ಸುಮಾರು 18 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಶಾಲೆಗಳ ಅಭಿವೃದ್ಧಿ, ಸಾಂಸ್ಕೃತಿಕ ಭವನಗಳ ನಿರ್ಮಾಣ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು ಈ ಅನುದಾನ ಬಿಡುಗಡೆ ಮಾಡಲಾಗಿದ್ದು ಈ ಪೈಕಿ ಇದುವರೆಗೆ 927.72 ಲಕ್ಷ ಹಣ ಬಳಕೆ ಪ್ರಮಾಣಪತ್ರ ಸಲ್ಲಿಸಲಾಗಿದೆ. ಇನ್ನುಳಿದ 868.28 ಲಕ್ಷ ರೂಪಾಯಿ ಅನುದಾನಕ್ಕೆ ಸಂಬಂಧಿಸಿದಂತೆ ಹಣ ಬಳಕೆ ಪ್ರಮಾಣಪತ್ರವನ್ನು ಹದಿನೈದು ದಿನಗಳ ಒಳಗಾಗಿ ಸಲ್ಲಿಸಬೇಕು ಎಂದು ಡಾ.ಸಿ.ಸೋಮಶೇಖರ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಮೂಲಸೌಕರ್ಯ ಅಭಿವೃದ್ಧಿ ಆರ್ಥಿಕತೆಯ ಪ್ರೇರಕ ಶಕ್ತಿ: ಪ್ರಧಾನಿ ಮೋದಿ