Advertisement
ಸರಕಾರದ ಇದುವರೆ ಗಿನ ನಡೆಯಿಂದ ಅಸಮಾಧಾನಗೊಂಡಿ ರುವ ಲಿಂಗಾಯತ ಪಂಚಮಸಾಲಿ ಸಮಾಜದ ಸದಸ್ಯರು ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್ ರ್‍ಯಾಲಿಗೆ ಜಿಲ್ಲಾಡಳಿತ ನಿಷೇಧ ಹೇರಿದ್ದರಿಂದ ಕಾಲ್ನಡಿಗೆಯಲ್ಲೇ ಪ್ರತಿಭಟನ ಸ್ಥಳಕ್ಕೆ ತೆರಳುವುದಾಗಿ ಕೂಡಲಸಂಗಮ ಶ್ರೀ ಘೋಷಿಸಿದ್ದಾರೆ. ಪಂಚಮಸಾಲಿ ಸಮಾಜದ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗಾವಿ ನಗರದಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುವರ್ಣ ವಿಧಾನಸೌಧದ ಸುತ್ತ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಡಿ. 10ರಂದು ಉದ್ದೇಶಿಸಿದ್ದ ಟ್ರ್ಯಾಕ್ಟರ್ ರ್‍ಯಾಲಿ ಬದಲಾಗಿ ಕಾಲ್ನಡಿಗೆ ಮೂಲಕ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸುವರ್ಣ ವಿಧಾನಸೌಧ ಎದುರಿನ ಕೊಂಡಸಕೊಪ್ಪ ಗ್ರಾಮದ ಬಳಿಯ ವಿಶಾಲ ಮೈದಾನದಲ್ಲಿ ನಡೆಯಲಿರುವ ಪ್ರತಿಭಟನಾ ಸ್ಥಳ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರದಿಂದ ನಮಗೆ ಸರಿಯಾದ ಸ್ಪಂದನೆ ಸಿಗದಿದ್ದರೆ, ಮೀಸಲಾತಿಯ ಅ ಧಿಕೃತ ಭರವಸೆ ಸಿಗದಿದ್ದರೆ ಎಲ್ಲ ಟ್ರ್ಯಾಕ್ಟರ್ ಗಳನ್ನು ತಂದು ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.