Advertisement

ಬೆಳಗಾವಿ: ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ದತೆ ನಡೆಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

12:59 PM May 28, 2021 | Team Udayavani |

ಬೆಳಗಾವಿ: ಪ್ರವಾಹ ಹಾಗೂ ಅತಿವೃಷ್ಟಿಯಂತಹ ತುರ್ತು ಸಂದರ್ಭದಲ್ಲಿ ತಕ್ಷಣಕ್ಕೆ ಜನರ ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಸಕ್ತ ಸಾಲಿನ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು

ಈ ಬಾರಿ ಮಳೆಗಾಲ ಸಾಮಾನ್ಯವಾಗಿ ಇರಲಿದೆ ಎಂಬ ವರದಿಗಳಿವೆ. ಆದಾಗ್ಯೂ ನಾವು ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹವಾಮಾನ ಇಲಾಖೆಯು ಕಾಲಕಾಲಕ್ಕೆ ಮುನ್ಸೂಚನೆ ಹಾಗೂ ಹವಾಮಾನ ವರದಿಯನ್ನು ನೀಡಲಿದೆ. ಈ ವರದಿಯನ್ನು ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಕಳೆದ ಎರಡು ವರ್ಷಗಳಲ್ಲಿ ಪ್ರವಾಹ‌ ನಿರ್ವಹಣೆಯಲ್ಲಿ ಚೆನ್ನಾಗಿ ಕಾರ್ಯನಿರ್ವಹಿಸಲಾಗಿದೆ. ಈ ಬಾರಿಯೂ ಸಹ ಅದೇ ರೀತಿಯಲ್ಲಿ ತಂಡಗಳನ್ನು ರಚಿಸಲಾಗುವುದು. ತಂಡಗಳನ್ನು ರಚಿಸಿದ ಬಳಿಕ ಅಧಿಕಾರಿಗಳು ಹಾಗೂ ತಂಡದ ಕರ್ತವ್ಯಗಳನ್ನು ಪಟ್ಟಿ ಮಾಡಿ ಸಮಗ್ರ ಮಾಹಿತಿಯನ್ನು ಹೊಂದಿರುವ ಬುಕ್ ಲೆಟ್ ಗಳನ್ನು ಸಿದ್ಧಪಡಿಸಿ ಪ್ರತಿ ತಾಲೂಕಿಗೆ ಹಂಚಿಕೆ ಮಾಡುವಂತೆ ಸೂಚನೆ ನೀಡಿದರು.

ಇದನ್ನೂ ಓದಿ:ಅಶಿಸ್ತನ್ನು ಬಿಜೆಪಿ ಸಹಿಸುವುದಿಲ್ಲ, ಮನಸ್ಸಿಲ್ಲದಿದ್ದರೆ ಯೋಗೇಶ್ವರ್ ಹೊರಹೋಗಬಹುದು:ಈಶ್ವರಪ್ಪ

Advertisement

ಕಳೆದ ಬಾರಿಯಂತೆ ಆಯಾ ಸ್ಥಳಗಳಲ್ಲಿಯೇ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗುವುದು. ಬೋಟ್ ಗಳನ್ನು ಮುಂಚಿತವಾಗಿ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದ ಅವರು ತುರ್ತು ಸಂದರ್ಭಗಳಲ್ಲಿ ನದಿತೀರದ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಅಗತ್ಯವಿರುವ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಬೋಟ್ ಗಳ ಕುರಿತು ಎಲ್ಲ ಉಪ ವಿಭಾಗಾಧಿಕಾರಿಗಳು ಕೂಡಲೇ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.

ತುರ್ತು ಸಂದರ್ಭದಲ್ಲಿ ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳಿಗೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿಯನ್ನು ಒದಗಿಸಲು ಎಲ್ಲ ತಾಲ್ಲೂಕು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 24×7 ಕಂಟ್ರೋಲ್ ರೂಮ್ ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.

ಸಂಬಂಧಿಸಿದ ನೋಡಲ್ ಅಧಿಕಾರಿಗಳು ತಮಗೆ ನಿಯೋಜಿಸಲಾದ ತಾಲ್ಲೂಕುಗಳಿಗೆ ತೆರಳಿ ತಾಲ್ಲೂಕು ಮಟ್ಟದಲ್ಲಿ ಸಭೆಯನ್ನು ನಡೆಸುವ ಮೂಲಕ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾಹಿತಿಯನ್ನು ನೀಡಬೇಕು ಎಂದರು. ನದಿ ತೀರಗಳು ಮಾತ್ರವಲ್ಲದೇ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇರುವ ನಾಲಾ ಹಾಗೂ ದೊಡ್ಡ ದೊಡ್ಡ ಗಟಾರುಗಳನ್ನು ಸ್ವಚ್ಛತೆ ಮಾಡುವುದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲಿದೆ. ಆದ್ದರಿಂದ ನಾಲಾ-ಗಟಾರುಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ‌ಹಿರೇಮಠ ಸೂಚನೆ ನೀಡಿದರು.

ಪ್ರವಾಹ ಸಂದರ್ಭದಲ್ಲಿ ಬಳ್ಳಾರಿ ನಾಲಾದಿಂದ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಇದನ್ನೂ‌ ಸಹ ಸ್ವಚ್ಛಗೊಳಿಸುವ ಕೆಲಸವನ್ನು ಸಂಬಂಧಿಸಿದ ‌ಇಲಾಖೆಯ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಹಾಗೂ ನೆರೆಯ ಮಹಾರಾಷ್ಟ್ರದ ಜಲಾಶಯಗಳ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಜಲಾಶಯ ಮಟ್ಟ ಹಾಗೂ ನೀರು ಬಿಡುಗಡೆ ಬಗ್ಗೆ ಪರಸ್ಪರ ಮಾಹಿತಿಯನ್ನು ವಿನಿಮಯ‌ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಬಾರಿ ಕೋವಿಡ್ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಕೇಂದ್ರ ನಿರ್ವಹಣೆಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ, ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ, ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತ ವಿಕ್ರಮ್ ಆಮಟೆ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next