Advertisement

ಕರ್ನಾಟಕ ರಾಜ್ಯೋತ್ಸವ ವೇಳೆ ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

02:16 PM Oct 12, 2021 | Team Udayavani |

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ  ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು, ಕರಾಳ ದಿನ ಆಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ರಾಜ್ಯೋತ್ಸವ ಮೆರವಣಿಗೆಗೆ ಸರಕಾರದ ಕೋವಿಡ್ ಮಾರ್ಗಸೂಚಿ ಆಧರಿಸಿ ಅನುಮತಿ ನೀಡಲಾಗುವುದು ಎಂದರು.

ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ರಾಜ್ಯೋತ್ಸವ ಆಚರಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಶೇ.84 ರಷ್ಟು ಲಸಿಕಾಕರಣ ಆಗಿದ್ದು, ಕೋವಿಡ್ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಆದರೆ ಸಂಪೂರ್ಣವಾಗಿ ಹೋಗಿಲ್ಲ.ಸದ್ಯಕ್ಕೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಶೇ.0.3 ರಷ್ಟಿದೆ. ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘಟನೆಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಮಾತನಾಡಿ, ರಾಜ್ಯೋತ್ಸವ ಮೆರವಣಿಗೆ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ  ಅಶೋಕ ಚಂದರಗಿ, ಈ ಬಾರಿ ರಾಜ್ಯೋತ್ಸವ ಅದ್ಧೂರಿಯಾಗಿ ನಡೆಯಬೇಕು‌. ಸರಕಾರದ ಎಲ್ಲ ಮಾರ್ಗಸೂಚಿ ‌ಪಾಲಿಸುವ ಮೂಲಕ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ಅವಕಾಶ ಕಲ್ಪಿಸಬೇಕು ಎಂದು  ಒತ್ತಾಯಿಸಿದರು.

Advertisement

ದೀಪಕ್ ಗುಡಗನಟ್ಟಿ ಮಾತನಾಡಿ, ಕನ್ನಡ ಭಾಷೆಯ ಅನುಷ್ಠಾನಕ್ಕೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಸಾಧಕರಿಗೆ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಬೇಕು. ಈ ಬಾರಿಯ ವಿಜೃಂಭಣೆಯ ರಾಜ್ಯೋತ್ಸವ ಆಚರಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಶ್ರೀನಿವಾಸ್ ತಾಳೂರಕರ ಸಲಹೆ ನೀಡಿದರು.

ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನದಾರ ಮಾತನಾಡಿ, ಕನ್ನಡಪರ ಹೋರಾಟಗಾರರು ಹಾಗೂ ಪತ್ರಕರ್ತರಿಗೆ ಪ್ರತಿವರ್ಷದಂತೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಬೇಕು. ಸಮಿತಿಗಳ ಮೂಲಕ ಅರ್ಹರನ್ನು ಗುರುತಿಸಿ ಪ್ರಶಸ್ತಿ ನೀಡುವ ಕ್ರಮವಾಗಬೇಕು ಎಂದು ಸಲಹೆ ನೀಡಿದರು.

ಕಳೆದ ಒಂದೆರಡು ವರ್ಷಗಳ ಅವಧಿಯಲ್ಲಿ ಕನ್ನಡಪರ, ರೈತಪರ ಹಾಗೂ ದಲಿತಪರ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನ ಆಚರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next