ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಹಾಗೂ ಶ್ರೀ ಜೋಗುಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಅಂಗಡಿ ಮುಗ್ಗಟ್ಟುಗಳನ್ನು ತೆರೆಯುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಡೆಲ್ಟಾ ಪ್ಲಸ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಮುಂಜಾಗೃತಾ ಕ್ರಮವಾಗಿ ಮತ್ತು ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಅಂಗಡಿ ಮುಗ್ಗಟ್ಟುಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ.
ಶ್ರೀ ರೇಣುಕಾ ಯಲ್ಲಮ್ಮ ದೇವಿ ಹಾಗೂ ಶ್ರೀ ಜೋಗುಳಭಾವಿ ಸತ್ತೆಮ್ಮ ದೇವಿ ದೇವಸ್ಥಾನಗಳ ಆಡಳಿತ ಮಂಡಳಿಯವರು ಈ ದೇವಸ್ಥಾನಗಳಲ್ಲಿ ನಡೆಯುವ ದಿನನಿತ್ಯದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ಎಲ್ಲಾ ಮುಂಜಾಗೃತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಲಾಗಿದೆ.
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.