ಬೆಂಗಳೂರು: ಕೋವಿಡ್ ಪ್ರಕರಣ ಇನ್ನೂ ತನಿಖಾ ಹಂತದಲ್ಲಿ ಇರುವಾಗಲೇ ಬಿಜೆಪಿ ಅವಧಿಯಲ್ಲಾದ ಮತ್ತೂಂದು ಹಗರಣಕ್ಕೆ ಆಡಳಿತಾರೂಢ ಕಾಂಗ್ರೆಸ್ ಕೈಹಾಕಿದ್ದು, ಈ ಬಾರಿ ಬೇಲೆ ಕೇ ರಿ ಅದಿರು ನಾಪತ್ತೆ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತರಲು ಉದ್ದೇಶಿಸಿದೆ.
ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಶನಿವಾರ ಸುದ್ದಿಗೋಷ್ಠಿ ನಡೆಸಿ, ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಜುಲೈನಲ್ಲಿ ಲೋಕಾಯುಕ್ತ ಸಲ್ಲಿಸಿದ ತನಿಖಾ ವರದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೃಪಾಪೋಷಿತ ಅದಾನಿ ಗ್ರೂಪ್‌ಗೆ ಸೇರಿದ ಕಂಪೆನಿ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹಾಗಾಗಿ, ಕೂಡಲೇ ಅದರ ವಿರುದ್ಧವೂ ಕಾನೂನು ರೀತಿ ಕ್ರಮ ಜರಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
ಅಕ್ರಮ ಅದಿರು ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 8,05,991.083 ಟನ್ ಅಕ್ರಮ ಅದಿರನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಅದಿರನ್ನು ಮಲ್ಲಿಕಾರ್ಜುನ ಶಿಪ್ಪಿಂಗ್, ಅದಾನಿ ಎಂಟರ್‌ಪ್ರೈಸಸ್, ಸಲಗಾಂವಕರ್ ಮೈನಿಂಗ್ ಇಂಡಸ್ಟ್ರಿ ಮತ್ತು ರಾಜ್ ಮಹಲ್ ಕಂಪೆನಿಗಳು ವಿದೇಶಕ್ಕೆ ಕಳ್ಳಸಾಗಣೆ ಮಾಡಿರು ವು ದು ಲೋಕಾಯುಕ್ತ ತನಿಖೆಯಲ್ಲಿ ಪತ್ತೆಯಾಗಿತ್ತು. ಎಲ್ಲ ಕಂಪೆನಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆಯೂ ಲೋಕಾಯುಕ್ತ ಸಂಸ್ಥೆ ಶಿಫಾರಸು ನೀಡಿತ್ತು. ಆದರೆ ಅದಾನಿ ಕಂಪೆನಿ ಹೊರತಾಗಿ ಇತರ 3 ಕಂಪೆನಿ ವಿರುದ್ಧ ಸಿಬಿಐ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಂಡು ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸದ್ಯ ಈ ಶಿಕ್ಷೆಯನ್ನು ಹೈಕೋರ್ಟ್ ಅಮಾನತಿನಲ್ಲಿಟ್ಟಿದೆ ಎಂದು ಹೇಳಿದರು.
ಲೋಕಾಯುಕ್ತರು ಅಂದು ನೀಡಿದ ವರದಿಯ ಪ್ರತಿಯನ್ನು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಿದ್ದು, ಅದಾನಿ ಕಂಪೆನಿ ವಿರುದ್ಧವೂ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಲಿದ್ದೇನೆ. ಈ ಪ್ರಕರಣದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಿದ್ದರೂ ಕ್ರಮ ಜರಗಿಸಬೇಕು ಎಂದರು.
ತನಿಖೆಯೇ ನಡೆಯುತ್ತಿಲ್ಲ
ವಿಚಿತ್ರವೆಂದರೆ ಈ ಮೂರು ಕಂಪೆನಿಗಳಿಗಿಂತ ಘೋರ ಆರೋಪ ಎದುರಿಸುತ್ತಿರುವ ಅದಾನಿ ಕಂಪೆನಿ ವಿರುದ್ಧ ಯಾವುದೇ ತನಿಖೆ ನಡೆಯುತ್ತಿಲ್ಲ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಗೆ ಅದಾನಿ ಕಂಪೆನಿ ಲಂಚ ನೀಡಿ ಈ ಅಕ್ರಮ ಅದಿರು ಸಾಗಾಣೆ ಮಾಡುತ್ತಿತ್ತು ಎಂಬ ಆರೋಪದ ಬಗ್ಗೆ ವಿಚಾರಣೆ ನಡೆದಿಲ್ಲ. ಲೋಕಾಯುಕ್ತರು ಅದಾನಿ ಕಂಪೆನಿ ಕಂಪ್ಯೂಟರ್ ಜಪ್ತಿ ಮಾಡಿದಾಗ, ಅದರಲ್ಲಿ ಕಂಪೆನಿಯವರು ಯಾವ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಎಷ್ಟು ಹಣ ನೀಡಬೇಕು ಎಂಬ ವಿವರಗಳನ್ನು ಒಳಗೊಂಡ ಮಾಹಿತಿಯೂ ಇದೆ. ಅದು ಲೋಕಾಯುಕ್ತ ವರದಿಯಲ್ಲೂ ಸ್ಪಷ್ಟವಾಗಿ ಉಲ್ಲೇಖೀಸಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಅವರು ಪ್ರಶ್ನಿಸಿದರು.