ಬೆಳಗಾವಿ: ಸ್ಮಾರ್ಟ್‌ಸಿಟಿ ಯೋಜನೆಯಡಿ 76.80 ಕೋಟಿ ರೂ. ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ರಾಜ್ಯದ ಮೊದಲ ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ (ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್)ವನ್ನು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಬುಧವಾರ ಲೋಕಾರ್ಪಣೆಗೊಳಿಸಿದರು.
ವಿಶ್ವೇಶ್ವರ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ್ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಅಶೋಕ ನಗರದಲ್ಲಿರುವ ಈಜುಕೊಳ ಹಾಗೂ ವ್ಯಾಯಾಮಶಾಲೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ (ಕಚೇರಿ ಸಂಕೀರ್ಣ) ಮತ್ತು ಆಂಗ್ಲ ಮಾಧ್ಯಮ ಶಾಲೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಬೆಳಗಾವಿ ನಾಗರಿಕ ಸೇವಾ ಅಪ್ಲಿಕೇಷನ್ ಅನ್ನು ಮುಖ್ಯಮಂತ್ರಿಗಳು ಸಾರ್ವಜನಿಕ ಬಳಕೆಗೆ ಬಿಡುಗಡೆಗೊಳಿಸಿದರು. ಈ ಆ್ಯಪ್ ಮೂಲಕ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಕಮಾಂಡ್ ಸೆಂಟರ್‌ಗೆ ಹಾಗೂ ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ದುರ್ಯೋಧನ ಐಹೊಳೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಶ್ವಾಸ್, ಡಿಸಿ ಡಾ| ಎಸ್.ಬಿ. ಬೊಮ್ಮನಹಳ್ಳಿ, ಜಿಪಂ ಸಿಇಒ ರಾಜೇಂದ್ರ ಕೆ ವಿ, ನಗರ ಪೊಲೀಸ್ ಆಯುಕ್ತ ಎಸ್.ಬಿ. ಲೋಕೇಶಕುಮಾರ, ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಇದ್ದರು.
ಎದ್ದುಕಂಡ ಶಾಸಕರ ಗೈರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಜಾಗ ಪಡೆಯಲು ತೀವ್ರ ಲಾಬಿ ನಡೆಸುತ್ತಿರುವ ಹಿರಿಯ ಶಾಸಕ ಉಮೇಶ ಕತ್ತಿ, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಮಹೇಶ ಕುಮಟಳ್ಳಿ ಅವರ ಅನುಪಸ್ಥಿತಿ ಚರ್ಚೆಗೆ ಗ್ರಾಸವಾಯಿತು. ಕೆಎಂಎಫ್ ಆಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಹ ಈ ಕಾರ್ಯಕ್ರಮದಿಂದ ದೂರ ಉಳಿದಿದ್ದರು.