ಬೆಳಗಾವಿ: ವಿಜ್ಞಾನವು ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ವಿಜ್ಞಾನವಿಲ್ಲದೆ ಜಗತ್ತೇ ಇಲ್ಲ. ನಿತ್ಯ ಜೀವನದಲ್ಲಿ ವಿಜ್ಞಾನ ಹಾಸುಹೊಕ್ಕಾಗಿದ್ದು, ಗ್ರಾಮೀಣ ಜನರಿಗೂ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಎಸ್ ಆರ್ ಡೊಂಗರೆ ಅಭಿಪ್ರಾಯಪಟ್ಟರು.
Advertisement
ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ಜಯಭಾರತ ಫೌಂಡೇಶನ್ ಸಹಯೋಗದಲ್ಲಿ ನಗರದ ಚಂದ್ರಗಿರಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ವೈಜ್ಞಾನಿಕ ಮನೋಭಾವನೆ ಮೂಡಿಸುವ ವಿಜ್ಞಾನ ಒಂದು ಚಿಂತನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಸಮಾಜದಲ್ಲಿ ಎದುರಾಗುವ ಅನೇಕ ಸಮಸ್ಯೆಗಳಿಗೆ ವಿಜ್ಞಾನದಿಂದ ಪರಿಹಾರ ಕಂಡುಕೊಳ್ಳಬಹುದು. ನಮ್ಮಲ್ಲಿ ಆಗುವ ಪ್ರತಿ ಬೆಳವಣಿಗೆಗೂ ವೈಜ್ಞಾನಿಕ ಕಾರಣವಿರುತ್ತದೆ.ಇದನ್ನು ಅರಿಯದೆ ಅನೇಕರು ಮೂಢನಂಬಿಕೆಗೆ ಬಲಿಯಾಗುತ್ತಿದ್ದು ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಹಾಗೂ ಸಂಶೋಧನೆ ಮೂಲಕ ಅಂಧಕಾರ ತೊಡೆದು ಹಾಕಬೇಕು ಎಂದರು.
ವಿಜ್ಞಾನ ಎಂಬುದು ನಾಶ ಮಾಡುವುದಲ್ಲ. ಇದು ಜಗತ್ತನ್ನು ಕಟ್ಟಲು ಬೇಕಾದ ಸಂಶೋಧನೆ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಸಾಧನ. ಸತ್ಯವನ್ನು ಶೋಧಿಸಲು ವಿಜ್ಞಾನ ಇಂದಿನ ದಿನಮಾನಗಳಲ್ಲಿ ಅತ್ಯಗತ್ಯವಾಗಿದೆ ಎಂದರು. ಚಂದ್ರಗಿರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎ ಎಲ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಎಸ್ ಬಿ ಮುನ್ನೊಳ್ಳಿ, ಅರ್ಜುನ ಶಿಂಧೆ, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಕಿರಣ ಚೌಗಲಾ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಉಪಸ್ಥಿತರಿದ್ದರು. ಉಪನ್ಯಾಸಕಿ ಗಿರಿಜಾ ಸುಂಕದ ಸ್ವಾಗತಿಸಿ, ವಂದಿಸಿದರು.