Advertisement

ಅರಣ್ಯ ಸಿಬ್ಬಂದಿ ಕಾರ್ಯ ಅನನ್ಯ

03:31 PM Sep 12, 2019 | Naveen |

ಬಳ್ಳಾರಿ: ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾಡುಮೇಡು ಗುಡ್ಡಬೆಟ್ಟ ಪ್ರದೇಶಗಳಲ್ಲಿ ಜೀವದ ಹಂಗನ್ನು ತೊರೆದು ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಉಳುವಿಗಾಗಿ ಶ್ರಮವಹಿಸಿ ದುಡಿಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ತಿಳಿಸಿದರು.

Advertisement

ನಗರದ ವನ್ಯಜೀವಿಗಳ ಕಿರು ಮೃಗಾಲಯದ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಹುತಾತ್ಮರ ದಿನಾಚರಣೆ ನಿಮಿತ್ತ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇವರುಗಳಿಗೆ ಎಲ್ಲರು ಒತ್ತಾಸೆಯಾಗಿ ನಿಂತು ಧೈರ್ಯ ಮತ್ತು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಪಿ.ಟಿ. ಕಟ್ಟಿಮನಿ ಮಾತನಾಡಿ, ಅರಣ್ಯ ಇಲಾಖೆ ಅಧಿಕಾರಿ/ಸಿಬ್ಬಂದಿ ದುರ್ಗಮವಾದ ಅರಣ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಜೀವದ ಹಂಗನ್ನು ತೊರೆದು ಕಾರ್ಯನಿರ್ವಹಿಸುತ್ತಿರುವುದನ್ನು ನಾನು ಖುದ್ದು ಅರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗಮನಿಸಿದ್ದೇನೆ. ಹೆಗ್ಗಡದೇವನ ಕೋಟೆ ಅರಣ್ಯ ಭಾಗದಲ್ಲಿ ನಾನು ಸಂಚರಿಸುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಮತ್ತು ವನ್ಯಜೀವಿಗಳೊಡನೆ ಭಾಂಧವ್ಯವನ್ನು ಹೊಂದಿ ಉತ್ತಮ ಕೆಲಸ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯಕತೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಎಸ್‌. ಲಿಂಗರಾಜು ಮಾತನಾಡಿ, ಅರಣ್ಯ ಇಲಾಖೆ ಸಿಬ್ಬಂದಿ ದೂರದ ಅರಣ್ಯ ಪ್ರದೇಶದೊಳಗೆ ಕಾರ್ಯನಿರ್ವಹಿಸುತ್ತಿದ್ದು, ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತಮವಾದ ಅನುಕೂಲವಾದ ಶೈಕ್ಷಣಿಕ ಸೌಲಭ್ಯವಿಲ್ಲದೆ ವಂಚಿತರಾಗುತ್ತಿದ್ದಾರೆ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಮಾಡುವಾಗ ಅವರಲ್ಲಿ ಆಧುನಿಕ ಮಾದರಿ ಶಸ್ತ್ರಾಸ್ತ್ರ ಇಲ್ಲದೆ ಸಿಬ್ಬಂದಿ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವುದು ಮತ್ತು ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ರಕ್ಷಣೆ ಮಾಡುವುದು ತುಂಬ ಕಷ್ಟವಾಗುತ್ತಿದೆ. ಇಲಾಖೆಯ ಸಿಬ್ಬಂದಿಗೆ ಹೆಚ್ಚಿನ ಪ್ರೋತ್ಸಾಹ ಮತ್ತು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮತ್ತು ಶಸ್ತ್ರಾಸ್ತ್ರವನ್ನು ಪೂರೈಕೆ ಮಾಡುವುದರ ಜತೆಗೆ ಉತ್ತಮವಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

Advertisement

ಕಳೆದ 52 ವರ್ಷಗಳಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದವರ 47 ಅಧಿಕಾರಿ ಮತ್ತು ಸಿಬ್ಬಂದಿ ಹೆಸರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ| ರಮೇಶಕುಮಾರ, ಡಾ| ಮಾಲತಿ ಪ್ರಿಯಾ, ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next