ಬಳ್ಳಾರಿ: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಾಲಾ ಶಿಕ್ಷಕರನ್ನಾಗಿ ಪರಿಗಣಿಸಬೇಕು ಸೇರಿ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು. 9ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟಾರೆ 1.88 ಲಕ್ಷ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ 52 ಸಾವಿರ ಪದವೀಧರ ಶಿಕ್ಷಕರು ಇದ್ದಾರೆ. ಇವರೆಲ್ಲೂ ಈಗಾಗಲೇ 6ರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಬೋಧಿಸುತ್ತಾರೆ. ಆದರೆ, ರಾಜ್ಯ ಸರ್ಕಾರ ಪದವೀಧರ ಶಿಕ್ಷಕರನ್ನು 1 ರಿಂದ 5ನೇ ತರಗತಿಗೆ ಸೀಮಿತಗೊಳಿಸಿದೆ. ಈ ಅವೈಜ್ಞಾನಿಕ ನಿರ್ಣಯವನ್ನು ಕೂಡಲೇ ಹಿಂಪಡೆದು ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ಇದಕ್ಕೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾಯಿಸಬೇಕು. ಜತೆಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಹಲವು ವರ್ಷಗಳಿಂದ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್)ಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡರೂ ಪ್ರಯೋಜನವಾಗುತ್ತಿಲ್ಲ. ಕೂಡಲೇ ಈ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮುಂದುವರೆಸಬೇಕು. ಕಳೆದ ಮೂರು ವರ್ಷಗಳಿಂದ ಆಗದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಈಗ ಆರಂಭವಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಅಕ್ಟೋಬರ್ ತಿಂಗಳಲ್ಲಿ ಪುನಃ ಕೇವಲ ಕೋರಿಕೆ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಬೇಕು. ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವ ವಿದ್ಯಾರ್ಥಿಗಳನ್ನು ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಈ ಮೂಲಕ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದವರು ವಿವರಿಸಿದರು.
ಜು. 9ರಂದು ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ಸೇರಿ ನಗರದ ಡಿಡಿಪಿಐ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಬೇಡಿಕೆ ಈಡೇರಿಸದಿದ್ದಲ್ಲಿ ಸೆ. 5ರಂದು ಶಿಕ್ಷಕರ ದಿನಾಚರಣೆ ಬಹಿಷ್ಕರಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಜಗದೀಶ, ಗೀತಾ, ಕೋಶಾಧ್ಯಕ್ಷ ಪ್ರಭುಗೌಡ, ಸಹಕಾರ್ಯದರ್ಶಿ ಕೊಟ್ರಮ್ಮ, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಕವಿತಾ ಸೇರಿದಂತೆ ಹಲವು ಶಿಕ್ಷಕರು ಇದ್ದರು.