ಬಳ್ಳಾರಿ: ಅಯೋಧ್ಯೆಯಲ್ಲಿನ ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದದ ತೀರ್ಪು ಸುಪ್ರೀಂಕೋರ್ಟಿನಲ್ಲಿ ಶನಿವಾರ ಪ್ರಕಟಗೊಂಡ ಹಿನ್ನೆಲೆಯಲ್ಲಿ ಗಣಿಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದರು.
ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾರವರು ನಾಲ್ಕು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಿದ್ದರು. ಬಳ್ಳಾರಿ ನಗರ, ಸಿರುಗುಪ್ಪ, ಹೊಸಪೇಟೆ, ಹೂವಿನ ಹಡಗಲಿಯಲ್ಲಿ ತಲಾ ಒಂದೊಂದು ಕೆಎಸ್ ಆರ್‌ಪಿ ತುಕಡಿಗಳಗಳನ್ನ ನಿಯೋಜನೆ ಮಾಡಲಾಗಿತ್ತು.
ಸಾಮಾಜಿಕ ಜಾಲತಾಣಗಳ ಮೇಲೆ ಸೈಬರ್ ಕ್ರೈಂ ಬ್ರಾಂಚ್ ಪೊಲೀಸರು ಹದ್ದಿನ ಕಣ್ಣಿರಿಸಿದ್ದರು. ಶನಿವಾರ ನಡೆಯಬೇಕಿದ್ದ ಪ್ರತಿಭಟನೆಗಳನ್ನು ಮುಂದೂಡುವಂತೆ ಸೂಚಿಸಲಾಗಿತ್ತು. ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಶನಿವಾರ ಬೆಳಗ್ಗೆ 8ರಿಂದ ಸಂಜೆ 6ರವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿತ್ತು.
ತಗ್ಗಿದ್ದ ವಾಹನ ದಟ್ಟಣೆ: ರಾಜ್ಯ ಸರ್ಕಾರವೇ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಪ್ರತಿದಿನ ವಾಹನದಟ್ಟಣೆ ಹೆಚ್ಚಿರುತ್ತಿದ್ದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಇಳಿಮುಖವಾಗಿತ್ತು. ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಪೊಲೀಸ್ ವಾಹನವೊಂದು ಸ್ಥಳದಲ್ಲೇ ಬಿಡಾರ ಹೂಡಿತ್ತು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದ ವರದಿಯಾಗಿಲ್ಲ.