ಬಳ್ಳಾರಿ: ಜಿಲ್ಲೆಯ ತಾಪಮಾನದಿಂದ ಉಂಟಾಗುವ ಅನಾಹುತ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಇದ್ದಕ್ಕಾಗಿಯೇ ಪ್ರತ್ಯೇಕ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿ ಕಾರಿ ಎಸ್.ಎಸ್. ನಕುಲ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳೊಂದಿಗೆ ಶುಕ್ರವಾರ ಆಯೋಜಿಸಿದ್ದ ವಿಪತ್ತು ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನದ ಗರಿಷ್ಠತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದರ ಜೊತೆಗೆ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಕುಡಿಯುವ ನೀರಿನ ಅರವಟಿಗೆಗಳನ್ನು ಸ್ಥಾಪಿಸಬೇಕು. ತಾಪಮಾನ ಹೆಚ್ಚಾಗಿ ಬಿಸಿಗಾಳಿಯಿಂದ ನಮ್ಮ ಆರೋಗ್ಯದ ಮೇಲೆ ಆಗುವ ಪರಿಣಾಮಗಳನ್ನು ನಿಯಂತ್ರಿಸುವ ಜವಾಬ್ದಾರಿ ನಮ್ಮ ಮೇಲಿದೆ.
ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅಲ್ಲಿನ ಜನರಿಗೆ ಬಿಸಿಲಿನ ತಾಪಮಾನದಿಂದ ಆಗುವ ತೊಂದರೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹೇಳಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬೆಳಗ್ಗೆ ಮತ್ತು ಮಧ್ಯಾಹ್ನದ ಸಮಯದಲ್ಲಿ ಗಂಟೆಗೊಮ್ಮೆ ಎರಡು ಬಾರಿ ಲೋಟದಲ್ಲಿ ಶುದ್ಧ ಕುಡಿಯುವ ನೀರನ್ನು ಕುಡಿಸಲು ಕ್ರಮಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ತಾಪಮಾನಕ್ಕೆ ಸಂಬಂಧಪಟ್ಟಂತೆ ಪ್ರತಿಯೊಂದು ತಾಲೂಕುಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಲು ಆಯಾ ಇಲಾಖೆಗಳಿಗೆ ಜವಾಬ್ದಾರಿಗಳನ್ನು ನೀಡಲಾಗುತ್ತದೆ. ಈ ಸಮಿತಿಗೆ ಪ್ರೋತ್ಸಾಹ ನೀಡದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಕೊರೊನಾ ವೈರಸ್ ಹರಡದಂತೆ ಹೆಚ್ಚು ಜಾಗೃತಿ ವಹಿಸುತ್ತಿದ್ದು, ಬೆಂಗಳೂರು, ಹಾಸನ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲ್ಯಾಬ್‌ಗಳನ್ನು ತೆರೆಯಲಾಗಿದೆ ಎಂದು ವಿವರಿಸಿದರು.
ವಿಮ್ಸ್ ವೈದ್ಯರನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ನೇಮಿಸಲಾಗಿದ್ದು, ವೈದ್ಯರು ಎರಡು ದಿನಗಳಿಗೊಮ್ಮೆ ಹೊಸಪೇಟೆಗೆ ಭೇಟಿ ನೀಡಲಿದ್ದಾರೆ ಎಂದರು. ಕೊರೊನಾ ವೈರಸ್ ಬಗ್ಗೆ ಯಾರು ಭಯ ಪಡುವ ಅವಶ್ಯಕತೆ ಇಲ್ಲ ಕೊರೊನಾಗೆ ಸಂಬಂಧಿಸಿದ ಲಕ್ಷಣಗಳು ಕಂಡು ಬಂದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎ.ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಚ್.ಎಲ್.ಜನಾರ್ಧನ್, ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.