ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂಸದ ಈ. ತುಕಾರಾಂ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದರು.
ಲೋಕಸಭೆಗೆ ಆಯ್ಕೆಯಾದ ಬಳಿಕ ಬೆಂಗಳೂರಿಗೆ ಆಗಮಿಸಿದ ತುಕಾರಾಂ, ವಿಧಾನಸಭಾ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ, ಈ ಬಾರಿ ಪಕ್ಷದ ಸೂಚನೆ ಮೇರೆಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ. ಶ್ರೀರಾಮುಲು ವಿರುದ್ಧ ಕಣಕ್ಕಿಳಿದು ಸುಮಾರು 98,992 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದರು. ತೆರವಾದ ಸ್ಥಾನಕ್ಕೆ ತಮ್ಮ ಪುತ್ರಿಯನ್ನು ಕಣಕ್ಕಿಳಿಸುವ ಆಲೋಚನೆ ಇದೆ ಎನ್ನಲಾಗಿದೆ.
ಇಂದು ಕುಮಾರಸ್ವಾಮಿ ರಾಜೀನಾಮೆ ಸಲ್ಲಿಕೆ?
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಲಿದ್ದಾರೆ ಎಂದು ತಿರುಪತಿ ತಿರುಮಲ ದರ್ಶನ ಮುಗಿಸಿಕೊಂಡು ಬರುತ್ತಿದ್ದಂತೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ತಿಳಿದುಬಂದಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕೂಡ ಲೋಕಸಭೆಗೆ ಆಯ್ಕೆಯಾಗಿದ್ದು, ಅವರು ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಮಾಹಿತಿ ಇಲ್ಲ. ಬೊಮ್ಮಾಯಿ ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹಾಗೂ ದಕ್ಷಿಣ ಕನ್ನಡದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ.