ಬಳ್ಳಾರಿ: ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ತ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನವೆಂಬರ್ 1ರಂದು ಬೆಳಗ್ಗೆ 9ಕ್ಕೆ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ನಂತರ 9.15ಕ್ಕೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ
ಧ್ವಜಾರೋಹಣ ಸಂದೇಶ ನೀಡಲಿದ್ದಾರೆ. ತದನಂತರ 9.30ಕ್ಕೆ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು. ಮೆರವಣಿಗೆಯು ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ರಾಯಲ್ ವೃತ್ತದ ಮುಖಾಂತರ ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೊಲೀಸ್ ಠಾಣೆ, ಮೋತಿ ವೃತ್ತದ ಮಾರ್ಗವಾಗಿ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಲಿವೆ. ವಿವಿಧ ಸಾಂಸ್ಕೃತಿಕ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಮತ್ತು ಇದರ ಜೊತೆಗೆ ಜಿಲ್ಲೆಯ 14 ಇಲಾಖೆಗಳು ಸಿದ್ದಪಡಿಸಿದ ಸ್ತಬ್ಧಚಿತ್ರಗಳು ಸಹ ಮೆರವಣಿಗೆಯಲ್ಲಿ ಇರಲಿವೆ ಎಂದು ಅಪರ ಜಿಲ್ಲಾಧಿಕಾರಿಗಳು ಎಂ. ಸತೀಶ್ ಕುಮಾರ್ ವಿವರಿಸಿದರು.
ವೇದಿಕೆ ಕಾರ್ಯಕ್ರಮ ಬೆಳಗ್ಗೆ 11ಕ್ಕೆ ನಡೆಯಲಿದ್ದು, ಈ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶಾಸಕರು, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿ ಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಕುರಿತು ಸಂಪನ್ಮೂಲ ವ್ಯಕ್ತಿಯೊಬ್ಬರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಎಲ್ಲೆಡೆ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ಪ್ರತಿಯೊಬ್ಬರು ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಮುಕ್ತ ಮನಸ್ಸಿನಿಂದ ಆಚರಿಸಿ ಯಶಸ್ವಿಗೊಳಿಸೋಣ ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಮೇಶ್ ಪಿ.ಕೋನರೆಡ್ಡಿ, ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಸುರೇಶ್ ಬಾಬು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಕನ್ನಡಪರ ಸಂಘ-ಸಂಸ್ಥೆಯ ಪದಾಧಿ ಕಾರಿಗಳು ಇದ್ದರು.