ಬಳ್ಳಾರಿ: ಜಿಲ್ಲೆಯಲ್ಲಿ ಜೂ.25ರಂದು ಗುರುವಾರದಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜಿಲ್ಲೆಯಾದ್ಯಂತ 114 ಕೇಂದ್ರಗಳಲ್ಲಿ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದೆ ದ್ವಿತೀಯ ಭಾಷೆ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯಲ್ಲಿ ದ್ವಿತೀಯ ಭಾಷೆ ಪರೀಕ್ಷೆ ಬರೆಯಲು ಒಟ್ಟು 39,300 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, 37,309 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. 1991 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಪೈಕಿ 37,437 ವಿದ್ಯಾರ್ಥಿಗಳು ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಆವರಿಸಿರುವ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಝೋನ್ ಪ್ರದೇಶದ 163 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿದಾಗ ರೋಗ ಲಕ್ಷಣಗಳು ಕಂಡುಬಂದಿದ್ದ 16 ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಸಲಾಗಿದೆ ಎಂದು ಡಿಡಿಪಿಐ ಮಾರೆಪ್ಪ ತಿಳಿಸಿದ್ದಾರೆ.
ಇನ್ನು 1863 ಖಾಸಗಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, 1405 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 458 ವಿದ್ಯಾರ್ಥಿಗಳು ಗೈರಾಗಿದ್ದಾರೆ. ವಸತಿ ನಿಲಯದ 1274 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಕರೆತರುವ ಸಲುವಾಗಿ ಬಸ್, ವಾಹನ ಸೇರಿ 28 ವಾಹನಗಳನ್ನು ಬಳಸಿಕೊಳ್ಳಲಾಗಿದೆ. ನೆರೆ ರಾಜ್ಯಗಳಿಂದ ಹೆಸರು ನೋಂದಾಯಿಸಿಕೊಂಡಿದ್ದ 8 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಸರು ನೋಂದಾಯಿಸಿಕೊಂಡಿದ್ದ 561 ವಲಸೆ ವಿದ್ಯಾರ್ಥಿಗಳ ಪೈಕಿ 557 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಡಿಡಿಪಿಐ ವಿವರಿಸಿದ್ದಾರೆ.
ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರ್: ನಗರ ಹೊರವಲಯದ ಅಲ್ಲೀಪುರ ಗ್ರಾಮದಲ್ಲಿ ಶುಕ್ರವಾರ ಹಸೆಮಣೆ ಏರಬೇಕಿದ್ದ ವಿದ್ಯಾರ್ಥಿನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾಳೆ. ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ಸಂಬಂಧಿಕರ ಯುವಕನೊಂದಿಗೆ ಮದುವೆ ಮಾಡಲು ಪೋಷಕರು ಸಿದ್ಧತೆ ನಡೆಸಿದ್ದಾರೆ. ಮನೆಯಲ್ಲಿ ಮದುವೆಗೆ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಂಡಿದ್ದಾರೆ. ಈ ಕುರಿತು ಖಚಿತ ಮಾಹಿತಿ ಪಡೆದಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಮದುವೆ ಮನೆಗೆ ತೆರಳಿ ಮದುವೆ ತಡೆದಿದ್ದಾರೆ. ಜತೆಗೆ ವಿದ್ಯಾರ್ಥಿನಿಯನ್ನು ಕರೆತಂದು ನಗರದ ಮುನ್ಸಿಪಲ್ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇದ್ದರೂ, ಬರೆಯಲು ವಿದ್ಯಾರ್ಥಿನಿಗೆ ಅವಕಾಶ ನೀಡದ ಪೋಷಕರಿಗೆ ಅಧಿಕಾರಿಗಳು ತಿಳಿ ಹೇಳಿ ವಿದ್ಯಾರ್ಥಿನಿಯಿಂದ ಪರೀಕ್ಷೆ ಬರೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಪರೀûಾ ಕೇಂದ್ರದಲ್ಲಿ ಕೋವಿಡ್ ಸೋಂಕು ಹರಡದಂತೆ ಕೈಗೊಳ್ಳಬೇಕಿದ್ದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಬೆಳಗ್ಗೆ 8.30ರ ಸುಮಾರಿಗೆ ಪರೀûಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳನ್ನು ಸಾಮಾಜಿಕ ಅಂತರದೊಂದಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಆರೋಗ್ಯ ತಪಾಸಣೆ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಹಾಕಿ ಕೇಂದ್ರದ ಒಳಗೆ ಬಿಡಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ದೈಹಿಕ ಶಿಕ್ಷಕರು, ಸೂಪರ್ ವೈಜರ್ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು ಎಂದರು.