Advertisement

ಬೆಳೆ ಖರೀದಿ ಕೇಂದ್ರ ಸ್ಥಾಪಿಸಿ

04:51 PM Dec 06, 2019 | Naveen |

ಬಳ್ಳಾರಿ: ಜಿಲ್ಲೆಯಾದ್ಯಂತ ಭತ್ತ, ಮೆಣಸಿನಕಾಯಿ, ಹತ್ತಿ, ಜೋಳ ಖರೀದಿಸಲು ಸರ್ಕಾರ ಕೂಡಲೇ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು ವಿವಿಧ ಘೋಷಣೆಗಳನ್ನು ಕೂಗಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಬಳ್ಳಾರಿ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲ ತಾಲೂಕು ಕೇಂದ್ರಗಳಲ್ಲಿ ಭತ್ತ, ಹತ್ತಿ, ಮೆಣಸಿನಕಾಯಿ, ಜೋಳ ಕಡಲೆ, ತೊಗರಿ ಸೇರಿದಂತೆ ರೈತರು ಬೆಳೆಯುವ ನಾನಾ ಉತ್ಪನ್ನಗಳನ್ನು ಖರೀದಿಸಲು ಸರ್ಕಾರ ಕೂಡಲೇ ಆಯಾ ತಾಲೂಕುಗಳಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು. ಈಗಾಗಲೇ, ಹತ್ತಿ, ಭತ್ತ, ಮೆಣಸಿನಕಾಯಿ ಸೇರಿದಂತೆ ನಾನಾ ಬೆಳೆಗಳು ಬಂದಿದ್ದು, ಮಾರುಕಟ್ಟೆಯಲ್ಲಿ ದರ ಉತ್ತಮವಾಗಿದ್ದರೂ ರೈತರು ಕಡಿಮೆ ಬೆಲೆಯಲ್ಲಿ ದಲ್ಲಾಳಿಗಳಿಗೆ ಮಾರಾಟ ಮಾಡುವ ಸ್ಥಿತಿ ಎದುರಾಗಿದೆ. ಇದರಿಂದ ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆ ಬೆಳೆದ ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಈ ಕುರಿತು ಈಗಾಗಲೇ ಸಂಬಂಧಿಸಿದ ಇಲಾಖೆ ಮೇಲಧಿಕಾರಿಗಳ ಗಮನ ಸೆಳೆದರೂ ಇಲ್ಲಿವರೆಗೂ ಖರೀದಿ ಕೇಂದ್ರವನ್ನು ಸ್ಥಾಪಿಸಿಲ್ಲ ಎಂದು ಸಂಘದ ರಾಜ್ಯ ಕಾರ್ಯಾಧ್ಯಕ್ಷ ಆರ್‌. ಮಾಧವರೆಡ್ಡಿ ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಮಾತ್ರ ಹತ್ತಿ ಖರೀದಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅದರಂತೆ ಜಿಲ್ಲಾದ್ಯಂತ ಎಲ್ಲ ತಾಲೂಕುಗಳಲ್ಲಿ ಸರ್ಕಾರ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಭತ್ತ, ಹತ್ತಿ, ಮೆಣಸಿನಕಾಯಿ ಸೇರಿದಂತೆ ನಾನಾ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿದ್ದು, ಬೆಳೆಗೆ ತಕ್ಕಂತೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿಲ್ಲ. ಈ ಹಿನ್ನೆಲೆಯಲ್ಲಿ ರೈತರು ಕಡಿಮೆ ದರದಲ್ಲಿ ಮಾರಾಟ ಮಾಡುವುದು ಅನಿವಾರ್ಯವಾಗಿದೆ. ಲಕ್ಷಾಂತರ ರೂ.
ಖರ್ಚು ಮಾಡಿ ಬೆಳೆ ಬೆಳೆದ ರೈತರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ, ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು.

Advertisement

ಒಂದು ವೇಳೆ ನಿರ್ಲಕ್ಷ್ಯ ವಹಿಸಿದಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದವರು ಮನವಿಯಲ್ಲಿ ಎಚ್ಚರಿಸಿದ್ದಾರೆ. ಈ ವೇಳೆ ಸಂಘದ ಜಿ.ಪೊಂಪಾಪತಿ, ಅಖೀಲ ಭಾರತ ಜನಗಣ ಒಕ್ಕೂಟದ ಅಧ್ಯಕ್ಷ ಎನ್‌.ಗಂಗೀರೆಡ್ಡಿ, ಸಿರುಗುಪ್ಪ ತಾಲೂಕು ಅಧ್ಯಕ್ಷ ಎನ್‌.ರೆಡ್ಡಿ, ಮುಖಂಡರಾದ ಅಗಲಪ್ಪ. ಬಿ.ಸಿದ್ದರಾಮಗೌಡ, ಕೆ.ಎರ್ರಿಸ್ವಾಮಿ, ಎ.ತಿಪ್ಪಣ್ಣ, ರಾಮುಲು, ಎಂ.ಎರ್ರಿಸ್ಬಾಮಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next