Advertisement

13ರಂದು ವಾಲ್ಮೀಕಿ ಜಯಂತಿ ಆಚರಣೆ

02:54 PM Oct 04, 2019 | Naveen |

ಬಳ್ಳಾರಿ: ಇದೇ ಸೀಗೆಹುಣ್ಣಿಮೆ ದಿನವಾದ ಅ.13ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

Advertisement

ಅಂದು ಬೆಳಗ್ಗೆ 9ಕ್ಕೆ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ವಾಲ್ಮೀಕಿ ವೃತ್ತದಲ್ಲಿರುವ(ಎಸ್ಪಿ ಸರ್ಕಲ್‌) ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.

ನಂತರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೆರವಣಿಗೆಯು ವಾಲ್ಮೀಕಿ ವೃತ್ತದ ಮೂಲಕ ಆರಂಭವಾಗಿ ಎಚ್‌.ಆರ್‌. ಗವಿಯಪ್ಪ ವೃತ್ತದ ಮುಖಾಂತರ ನಲ್ಲಚೆರವು ಪ್ರದೇಶದಲ್ಲಿರುವ ವಾಲ್ಮೀಕಿ ಭವನಕ್ಕೆ ತಲುಪಲಿದ್ದು, ವಿವಿಧ ಸಾಂಸ್ಕೃತಿಕ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ವಿವರಿಸಿದರು.

ವೇದಿಕೆ ಕಾರ್ಯಕ್ರಮ ಬೆಳಗ್ಗೆ 11ಕ್ಕೆ ನಡೆಯಲಿದ್ದು, ಇದಕ್ಕೂ ಮುಂಚೆ ವಾಲ್ಮೀಕಿ ಭವನದ ಎದುರುಗಡೆ ಪ್ರತಿಷ್ಠಾಪಿಸಲಾಗಿರುವ ಮಹರ್ಷಿ ವಾಲ್ಮೀಕಿ ಅವರ ಬೃಹತ್‌ ಕಂಚಿನ ಪುತ್ಥಳಿಯನ್ನು ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಲಿದ್ದಾರೆ. ಈ ಜಯಂತಿ ಕಾರ್ಯಕ್ರಮಕ್ಕೆ ಶಾಸಕರು, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿ ಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ. ನಾಡಿಗೆ ಮಹರ್ಷಿ ವಾಲ್ಮೀಕಿ ಅವರು ನೀಡಿದ ಕೊಡುಗೆ ಹಾಗೂ ಅವರ ತತ್ವಾದರ್ಶಗಳ ಕುರಿತು ಸಂಪನ್ಮೂಲ ವ್ಯಕ್ತಿಯೊಬ್ಬರು ಉಪನ್ಯಾಸ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಾಲ್ಮೀಕಿ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಜಿಲ್ಲೆಯ ಎಲ್ಲೆಡೆ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ವಿವರಿಸಿದರು.

Advertisement

ಕುಂದುಕೊರತೆ ಸಭೆ: ಇದೇ ವೇಳೆ ಪರಿಶಿಷ್ಟ ವರ್ಗಗಳ ಕುಂದುಕೊರತೆ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಕರೆದು ಸಮುದಾಯದವರ ಸಮಸ್ಯೆ ಆಲಿಸಬೇಕು ಎಂದು ಸಮುದಾಯದ ವಿವಿಧ ಮುಖಂಡರು ಸಭೆಯಲ್ಲಿ ಆಗ್ರಹಿಸಿದರು.

ಕಳೆದ ಎರಡು ವರ್ಷಗಳಿಂದ ಈ ಸಭೆಗಳು ನಡೆಯುತ್ತಿಲ್ಲ. ನಮ್ಮ ಸಮಸ್ಯೆಗಳು ಹೇಳಿಕೊಳ್ಳಲಾಗುತ್ತಿಲ್ಲ. ಕೂಡಲೇ ಒಂದು ದಿನಾಂಕ ನಿಗದಿಪಡಿಸಬೇಕು. ವಾಲ್ಮೀಕಿ ವಸತಿ ನಿಲಯಗಳಲ್ಲಿನ ಕುಂದುಕೊರತೆ ಕೂಡಲೇ ಇತ್ಯರ್ಥಪಡಿಸಿ, ಗುಣಮಟ್ಟದ ಶಿಕ್ಷಣ, ವಸತಿ ವ್ಯವಸ್ಥೆ ಮತ್ತು ಆಹಾರದ ವ್ಯವಸ್ಥೆ ಕಲ್ಪಿಸಬೇಕು. ವಸತಿ ನಿಲಯಗಳನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ಕೋರಿದರು. ಇದೇ ವೇಳೆ ವಾಲ್ಮೀಕಿ ಸಮುದಾಯದ ಕಲ್ಯಾಣಕ್ಕಾಗಿ ಶ್ರಮಿಸಿದ ತೆಕ್ಕಲಕೋಟೆ ಸಿದ್ದಪ್ಪಗೆ ಹಾಗೂ ಅಲ್ಲಿಪುರ ಹನುಮಂತ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು.

ಎಸ್‌ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್‌ ಮಾತನಾಡಿದರು. ವಾಲ್ಮೀಕಿ ಸಮುದಾಯದ ಮುಖಂಡರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next