ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷ ಕಠಿನ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿ ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ (48) ಶಿಕ್ಷೆಗೆ ಗುರಿಯಾದಾತ. ಈತ 2021ರ ಡಿಸೆಂಬರ್‌ನಿಂದ 2022ರ ಫೆಬ್ರವರಿ ವರೆಗೆ ತನ್ನ ಪರಿಚಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಬಾಲಕಿ 2022ರ ಮಾರ್ಚ್ 3ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಅರೋಪಿ ಮಾಡಿರುವ ಆರೋಪ ಸಾಬೀತಾಗಿದ್ದು, ನ್ಯಾಯಾಧೀಶ ರಾಧಾಕೃಷ್ಣ ಅವರು ಜ. 24ರಂದು ಆರೋಪಿಗೆ 20 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಆಕಸ್ಮಿಕವಾಗಿ ನದಿಗೆ ಬಿದ್ದು ಸಾವು
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕೊಳಂಬೆ ಸಮೀಪ ವ್ಯಕ್ತಿ ಆಕಸ್ಮಿಕ ವಾಗಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಚಾರ್ಮಾಡಿ ಕೊಳಂಬೆ ಪಾದೆ ಮನೆ ನಿವಾಸಿ ಧರ್ಣಪ್ಪ ಪೂಜಾರಿ (50) ಮೃತ ವ್ಯಕ್ತಿ. ಅವರು ಜ. 23ರಂದು ಕಕ್ಕಿಂಜೆ ಪೇಟೆಯಿಂದ ಸೊತ್ತು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆಯ ಸಮೀಪವಿರುವ ನದಿ ದಾಟುತ್ತಿದ್ದಾಗ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರನ್ನು ನದಿ ನೀರಿನಿಂದ ಮೇಲೆತ್ತುವ ಕಾರ್ಯ ಮಾಡಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ದುಡಿಯುವ ಶಕ್ತಿ ಹೊಂದಿರುವ ಪತಿ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್