Advertisement

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

01:11 AM Jul 06, 2024 | Team Udayavani |

ಬೆಂಗಳೂರು: ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿ, ಪೊಲೀಸರನ್ನು ನಿಂದಿಸಿದ ಆರೋಪಗಳನ್ನು ಕೈ ಬಿಡುವಂತೆ ವಿಚಾರಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಕಾನೂನು ಪರಿಹಾರ ಪಡೆದುಕೊಳ್ಳುವಂತೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರಿಗೆ ಹೈಕೋರ್ಟ್‌ ಸೂಚಿಸಿದೆ.

Advertisement

ಬೆಳ್ತಂಗಡಿ ಠಾಣಾ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್‌ ಪೂಂಜ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ನ್ಯಾಯಪೀಠ ಶುಕ್ರವಾರ ಈ ನಿರ್ದೇಶನ ನೀಡಿ, ಅರ್ಜಿಗಳನ್ನು ಇತ್ಯರ್ಥಪಡಿಸಿತು.

ಪ್ರಕರಣ ಸಂಬಂಧ ಶಾಸಕ ಪೂಂಜ ವಿರುದ್ಧ ಈಗಾಗಲೇ ಪೊಲೀಸರು ವಿಚಾರಣ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಅಂಶವನ್ನು ಪರಿಗಣಿಸಿದ ನ್ಯಾಯಪೀಠ ಈ ಆದೇಶ ಮಾಡಿದೆ. ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ಆರೋಪಗಳನ್ನು ಕೈ ಬಿಡಲು ಕೋರಿ ವಿಚಾರಣ ನ್ಯಾಯಾಲಯಕ್ಕೆ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯವು ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಸೂಚಿಸಿದ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿತು.

ಪ್ರಕರಣವೇನು?
ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಶಶಿರಾಜ್‌ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಇದರಿಂದ ಸಿಟ್ಟಾಗಿದ್ದ ಅರ್ಜಿದಾರರು ಠಾಣೆಗೆ ಭೇಟಿ ನೀಡಿ ಪೊಲೀಸ್‌ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ಬೈದು ಬೆದರಿಕೆ ಒಡ್ಡಿದ್ದರು. ಜತೆಗೆ, ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ಸಹ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್ಐಆರ್‌ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಹರೀಶ್‌ ಪೂಂಜ ಹೈಕೋರ್ಟ್‌ ಮೆಟ್ಟಿಲೆರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಅಧೀನ ನ್ಯಾಯಾಲಯಕ್ಕೆ ಪೊಲೀಸರು ಹರೀಶ್‌ ಪೂಂಜ ಹಾಗೂ ಇತರ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next