Advertisement

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

09:26 AM May 31, 2023 | Team Udayavani |

ಬೆಳ್ತಂಗಡಿ: ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

Advertisement

ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದವರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಇವರ ಕೊಡುಗೆ ಅಪಾರ.

ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು. ಅವರ ಸಾಧನೆಯ ಹಿಂದೆ ತರಬೇತುದಾರರಾದ ಉಜಿರೆ ಎಸ್.ಡಿ.ಎಂ. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಅವರ ಶ್ರಮ ಅಪಾರವಿದೆ.

Advertisement

ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ. ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಂಸಿ ಗೌರವಿಸಿದ್ದರು.

ಅವರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next