ಹೊಸದಿಲ್ಲಿ: ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿಗೆ ಮರಳಿದ ಘಟನೆ ನಡೆದಿದೆ.
AI 807 ವಿಮಾನ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 175 ಮಂದಿ ಪ್ರಯಾಣಿಕರು ಇದ್ದರು ಎಂದು ಮೂಲಗಳು ತಿಳಿಸಿವೆ.
ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಸಂಜೆ 6.40ರ ಸುಮಾರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ.
ಪ್ರಯಾಣಿಕರು ಬೆಂಗಳೂರಿಗೆ ತೆರಳಲು ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಡಾರ್ 24 ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿಮಾನವನ್ನು A321 ವಿಮಾನದೊಂದಿಗೆ ನಿರ್ವಹಿಸಲಾಗಿದೆ.