ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ವಿರುದ್ದ ಈಗ ರದ್ದಾಗಿರುವ ಚುನಾವಣಾ ಬಾಂಡ್ (Electoral Bonds Scheme) ಗಳ ಮೂಲಕ ಸುಲಿಗೆ ಆರೋಪದಲ್ಲಿ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೂಚಿಸಿದೆ.
ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್ ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆ (JSP) ಆದರ್ಶ್ ಅಯ್ಯರ್ ಎಂಬವರು ದೂರು ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂಚಿಸಿದೆ. ಈ ಪ್ರಕಾರ ಪೊಲೀಸರು ನಿರ್ಮಲಾ ಸೀತಾರಾಮನ್ ಮತ್ತು ಇತರರರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಚುನಾವಣಾ ಬಾಂಡ್ ಗಳನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿತ್ತು. ಎಲೆಕ್ಟೋರಲ್ ಬಾಂಡ್ ಗಳನ್ನು ʼಅಸಾಂವಿಧಾನಿಕʼ ಎಂದು ಸುಪ್ರೀಂ ಕೋರ್ಟ್ ಕರೆದಿತ್ತು. ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸಿದೆ ಎಂದು ಪೀಠ ಹೇಳಿತ್ತು.
2018ರಲ್ಲಿ ಕೇಂದ್ರ ಸರ್ಕಾರವು ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳ ಬದಲಿಗೆ ಎಲೆಕ್ಟೋರಲ್ ಬಾಂಡ್ ಗಳನ್ನು ಆರಂಭಿಸಿತ್ತು. ಆದರೆ ಬಾಂಡ್ ಗಳನ್ನು ನೀಡಿದವರ ಮಾಹಿತಿಯನ್ನು ಗುಪ್ತವಾಗಿ ಇರಿಸಲಾಗುತ್ತಿತ್ತು.
ಕೋರ್ಟ್ ಎಫ್‌ಐಆರ್ ದಾಖಲಿಸಲು ಸೂಚಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ನಿರ್ಮಲಾ ಸೀತಾರಾಮನ್ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಅವರ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿದೆ. ಹೀಗಾಗಿ ನಿರ್ಮಲಾ ವಿರುದ್ದ ಕೇಸು ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪ್ರತ್ಯಸ್ತ್ರ ಪ್ರಯೋಗಿಸಿದ್ದಾರೆ.