ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಮತ್ತು ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ವಿಭಾಗದ ಹೆಬ್ಬ ಗೋಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿಯನ್ನು ಸಿಐಡಿಯ ವಿಶೇಷ ತನಿಖಾ ದಳದ(ಎಸ್‌ಐಟಿ) ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಪ್ರಕರಣದಲ್ಲಿ ಇನ್‌ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ಪಾತ್ರ ಕಂಡು ಬಂದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಕರ್ತವ್ಯದ ವೇಳೆಯಲ್ಲೇ ಇನ್‌ಸ್ಪೆಕ್ಟರ್‌ರನ್ನು ಬಂಧಿಸಿದ್ದಾರೆ. ನಂತರ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನಾಲ್ಕು ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಡಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಬಳಿಕ ಷರತ್ತುಬದ್ಧ ಜಾಮೀನು ಪಡೆದು ಮುನಿರತ್ನ ಬಿಡುಗಡೆ ಆಗಿದ್ದಾರೆ. ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ, ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದ ತನಿಖೆಯನ್ನು ಸರ್ಕಾರವು ಎಸ್‌ಐಟಿಗೆ ವಹಿಸಿದ್ದು ತನಿಖೆ ಮುಂದುವರಿದಿದೆ. ಮುನಿರತ್ನ ಹಾಗೂ ಸಹಚರರು ನಡೆಸುತ್ತಿದ್ದ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಹಕಾರ ನೀಡಿದ್ದ ಆರೋಪದ ಮೇಲೆ ಐಯಣ್ಣ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ
ಮುನಿರತ್ನ ಆಪ್ತರಂತೆ ಕೆಲಸ ಮಾಡುತ್ತಿದ್ದ ಐಯ್ಯಣ್ಣ ರೆಡ್ಡಿ:
ಮುನಿರತ್ನ ಶಾಸಕರು ಹಾಗೂ ಸಚಿವರಾಗಿದ್ದ ಸಂದರ್ಭದಲ್ಲಿ ಐಯ್ಯಣ್ಣ ರೆಡ್ಡಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಠಾಣೆಗಳಲ್ಲೇ ಹೆಚ್ಚಿನ ವರ್ಷ ಕರ್ತವ್ಯ ನಿರ್ವಹಿಸಿದ್ದರು. ರಾಜಗೋಪಾಲನಗರ, ಯಶವಂತಪುರ, ಆರ್.ಆರ್.ನಗರ ಪೀಣ್ಯ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕೆಲ ವರ್ಷಗಳ ಹಿಂದೆ ಕಬ್ಬನ್ ಪಾರ್ಕ್ ಠಾಣೆಗೆ ವರ್ಗಾವಣೆಯಾಗಿದ್ದರು. ಕಳೆದ ಒಂದೂವರೆ ವರ್ಷದಿಂದ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.
ಮುನಿರತ್ನ ಮತ್ತು ತಂಡ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಇದ್ದರೂ ಐಯ್ಯಣ್ಣ ರೆಡ್ಡಿ ಕ್ರಮಕೈಗೊಂಡಿಲ್ಲ. ಜತೆಗೆ ಮುನಿರತ್ನ ವಿರುದ್ಧ ಯಾರಾದರೂ ಮಾತನಾಡಿದರೆ, ಅವರ ವಿರುದ್ಧ ವಿನಾ ಕಾರಣ ಪೊಲೀಸ್ ಠಾಣೆಗೆ ಕರೆಸಿ ಬೆದರಿಕೆ ಹಾಕುತ್ತಿದ್ದರು. ಹನಿಟ್ರ್ಯಾಪ್ ತಂಡ ಟಾರ್ಗೆಟ್ ಮಾಡುತ್ತಿದ್ದ ವ್ಯಕ್ತಿಯ ಮಾಹಿತಿಯನ್ನು ಐಯ್ಯಣ್ಣ ರೆಡ್ಡಿ ತಮ್ಮ ಅಧಿಕಾರ ಪ್ರಭಾವ ಬಳಸಿ ಸಂಗ್ರಹಿಸುತ್ತಿದ್ದರು. ಅದನ್ನು ಹನಿಟ್ರ್ಯಾಪ್ ತಂಡಕ್ಕೆ ಕಳುಹಿಸುತ್ತಿದ್ದರು.
ಈ ಮಧ್ಯೆ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಲ್ಲದೇ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಸೇರಿ ಕೆಲ ಮಹಿಳೆಯರು ಐಯಣ್ಣ ರೆಡ್ಡಿ ವಿರುದ್ಧ ಹೇಳಿಕೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣದಲ್ಲಿ ಪಿಐ ಪಾತ್ರ ಕಂಡು ಬಂದಿದ್ದರಿಂದ ಐಯ್ಯಣ್ಣ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.