ಉಡುಪಿ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ರಾಜಕೀಯ ಪಕ್ಷಗಳು ತಲೆಕೆಡೆಸಿಕೊಂಡಿದೆ. ಕಾಂಗ್ರೆಸ್ ರಾಜ್ಯದ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದರೂ, ಬಿಜೆಪಿ ಬುಧವಾರ ಅಥವಾ ಗುರುವಾರ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ರಾಜ್ಯದಲ್ಲಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಉಡುಪಿ – ಚಿಕ್ಕಮಗಳೂರು ಕೂಡಾ ಒಂದು. ಸದ್ಯ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ಸಿದ್ದತೆ ನಡೆಸುತ್ತಿದ್ದಾರೆ. ಸತತ ಎರಡು ಬಾರಿ ಆಯ್ಕೆಯಾಗಿರುವ ಅವರಿಗೆ ಸದ್ಯ ವಿರೋಧದ ಬಿಸಿಯೂ ಕಾಡುತ್ತಿದೆ. ಗೋ ಬ್ಯಾಕ್ ಶೋಭಾ ಅಭಿಯಾನ ನಡೆದಿದ್ದು, ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದೆ.
ಮತ್ತೊಂದೆಡೆ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿರುವ ಪ್ರಮೋದ್ ಮಧ್ವರಾಜ್ ಕೂಡಾ ಟಿಕೆಟ್ ಗಾಗಿ ಕಸರತ್ತು ನಡೆಸುತ್ತಿದ್ದಾರೆ. ಈ ಬಾರಿ ತನಗೆ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಚಿಕ್ಕಮಗಳೂರಿನಲ್ಲಿ ವಿಧಾನಸಭೆಯಲ್ಲಿ ಸೋತಿರುವ ಸಿ.ಟಿ ರವಿ ಕೂಡಾ ಸ್ವಕ್ಷೇತ್ರದಲ್ಲಿ ಲೋಕಸಭೆಗೆ ಸ್ಪರ್ಧಿಸುವ ಇರಾದೆಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕೋಟ ಪೂಜಾರಿಗೆ ಮಣೆ: ಸದ್ಯದ ವರದಿಯ ಪ್ರಕಾರ ಈ ಹೆಸರುಗಳನ್ನು ಬದಿಗಿಟ್ಟು ಅಚ್ಚರಿಯ ಅಭ್ಯರ್ಥಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲಿದೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಸೋಮವಾರ ನಡೆದ ಹೈಕಮಾಂಡ್ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎನ್ನುತ್ತಿದೆ ವರದಿ.
ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಟಿಕೆಟ್ ನೀಡಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ- ಚಿಕ್ಕಮಗಳೂರಿನಲ್ಲಿ ಕಣಕ್ಕಿಳಿಸಬಹುದು ಎನ್ನುವುದು ಸದ್ಯಕ್ಕಿರುವ ಸುದ್ದಿ.
ಕರಾವಳಿಯಲ್ಲಿ ಪ್ರಬಲ ಸಂಖ್ಯೆಯಲ್ಲಿರುವ ಬಿಲ್ಲವ ಸಮುದಾಯಕ್ಕೆ ಮಣೆ ಹಾಕುವುದು ಮತ್ತು ಉಡುಪಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಕೋಟ ಅವರ ಹೆಸರು ಮುಂಚೂಣಿಗೆ ಬಂದಿದೆ ಎನ್ನಲಾಗಿದೆ.