ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರ್ಪಡೆಗೊಳಿ ಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಗಳ ಮಠಾಧೀಶರ ಒಕ್ಕೂಟದ ನಿಯೋಗದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ. ಕಾಂಗ್ರೆಸ್ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರ ಚುನಾವಣಾ ಉದ್ದೇಶವನ್ನಿಟ್ಟುಕೊಂಡು ಮೀಸಲಾತಿ ಹೆಚ್ಚಳ ಮಾಡಿತ್ತು. ಅದೊಂದು ಚುನಾವಣಾ ಗಿಮಿಕ್. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇದರ ಕುರಿತು ನಾವು ಎಚ್ಚರದಿಂದಿರಬೇಕು ಎಂದರು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನ ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ ಎಂದು ಹೇಳಿದರು.
5 ಗ್ಯಾರಂಟಿ ಯೋಜನೆ: ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗದವರ ಪರವಾಗಿದೆ. ಹಿಂದೆ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚ ಆಗಲಿದೆ ಎಂದು ಹೇಳಿದರು.