ಬೆಂಗಳೂರು: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣದ ತನಿಖೆಯನ್ನು ಬೆಂಗಳೂರು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ನಡೆಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವರದಿ ತಿಳಿಸಿದೆ.
ಮಂಗಳವಾರ ರಾತ್ರಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಚೋದನಕಾರಿ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಒಂದು ಸಮುದಾಯದ ನೂರಾರು ಮಂದಿ ಏಕಾಏಕಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಎರಡು ಠಾಣೆಗಳ ಮೇಲೂ ಕಲ್ಲು ತೂರಾಟ ನಡೆಸಿದ್ದರು.
ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಿನ್ನಲೆ: ಅಲ್ಲಲ್ಲಿ ಹಿಂಸಾಚಾರ; ಕರ್ಫ್ಯೂ: 3 ಸಾವು
ಹಲವಾರು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದು, ಇದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೂವರು ಸಾವನ್ನಪ್ಪಿದ್ದರು. ಘಟನೆ ಯಾರು ಕಾರಣ, ಇದರ ಹಿನ್ನೆಲೆ ಏನು ಎಂಬ ಬಗ್ಗೆ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ಆಕ್ಷೇಪಾರ್ಹ ಪೋಸ್ಟ್-ಹಿಂಸಾಚಾರ ಕೇಸ್: ಆರೋಪಿ ನವೀನ್ ಸೇರಿ 110 ಮಂದಿ ಬಂಧನ
ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಬಿಎಸ್ ಯಡಿಯೂಪ್ಪ ಸಭೆ ನಡೆಸಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ತೀರ್ಮಾನ ಕೈಗೊಂಡಿರುವುದಾಗಿ ಸುದ್ದಿಗಾರರ ಜತೆ ಮಾತನಾಡುತ್ತ ಹೇಳಿದರು.