ಬೆಂಗಳೂರು: ನಗರದ ನಗರತ್ ಪೇಟೆಯ ಸಿದ್ಧಣ್ಣಗಲ್ಲಿಯ ಜುಮ್ಮಾ ಮಸೀದಿ ಸಮೀಪದ ಮೊಬೈಲ್ ಅಂಗಡಿ ಮಾಲಕ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದವು.
ಇದನ್ನೂ ಓದಿ:Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ನೀಡಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸುರೇಶ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸರು ಅವರನ್ನು ಎಳೆದಾಡಿದ ಪ್ರಸಂಗ ನಡೆಯಿತು. ಮಫ್ತಿಯಲ್ಲಿದ್ದ ಒಬ್ಬ ಪೊಲೀಸ್ ಸುರೇಶ್ ಕುಮಾರ್ ಅವರೊಂದಿಗೆ ಏರುಧ್ವನಿಯಲ್ಲಿ ಮಾತನಾಡಿರುವುದು ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಶೋಭಾ ಕರಂದ್ಲಾಜೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಾಗ, ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತು ಸ್ಥಳಕ್ಕೆ ಆಗಮಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಕೈಬಿಡಲಾಯ್ತು.