ಚಿಕ್ಕಬಳ್ಳಾಪುರ: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.
ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುಡಿಯುವ ನೀರು ಟಾಸ್ಕ್ಫೋರ್ಸ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮೂರು ತಿಂಗಳ ಯೋಜನಾ ವರದಿ ಸಿದ್ಧಪಡಿಸಿಕೊಳ್ಳಬೇಕು ಹಾಗೂ ವೈರಸ್‌ನಿಂದ ಪಟ್ಟಣ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಜನರು ಆಗಮಿಸಿರುವುದರಿಂದ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕುಡಿವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಸಮಸ್ಯೆಗಳಿಗೆ ಸ್ಪಂದಿಸಿ: ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಮಾತನಾಡಿ, ಕೋವಿಡ್ 19 ವೈರಸ್ ತಡೆಗಟ್ಟಲು ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್ 19 ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ತಾಲೂಕು ಮತ್ತು ಗ್ರಾಪಂ ಮಟ್ಟದ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.
ಮುಂಜಾಗ್ರತೆ ಅಗತ್ಯ: ಜಿಲ್ಲೆಯ ಎಲ್ಲಾ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಖುದ್ದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಭ್ಯ ಹಾಗೂ ಅಗತ್ಯವಿರುವ ಔಷಧಿಗಳ ಬಗ್ಗೆ ಖಾತ್ರಿ ಪಡಿಸಿಕೊಂಡು ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಸಾರ್ವಜನಿಕರು ಕೋವಿಡ್ 19 ತಡೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಮತ್ತಷ್ಟು ಜಾಗೃತರಾಗಿ ಅಧಿಕಾರಿ ಸಿಬ್ಬಂದಿಗಳ ಜೊತೆ ಕೈಜೋಡಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ನಿರ್ಮಲಾ, ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.