ಬೆಂಗಳೂರು: ಪಶ್ಚಿಮ ಘಟ್ಟದ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಪ್ರತಿ ವರ್ಷ ಸಾಗರ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಭಾಗದ ಜನರಲ್ಲಿ ಕೆಮ್ಮು ಜ್ವರದಂಥ ಲಕ್ಷಣಗಳು ಕಾಣಿಸಿಕೊಂಡಾಗ ಆರಂಭಿಕ ಹಂತದಲ್ಲಿಯೇ ಪರೀಕ್ಷೆ ಮಾಡಿ, ಲಕ್ಷಣಗಳಿರುವವರನ್ನು ಖಚಿತಪಡಿಸಿಕೊಂಡು ತತ್‌ಕ್ಷಣ ಚಿಕಿತ್ಸೆ ನೀಡಬೇಕು. ಪ್ರಕರಣ ಅಧಿಕವಾಗಿ ದಾಖಲಾಗುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿಕ್ಕಮಗಳೂರು: ಮತ್ತೂಬ್ಬರಿಗೆ ಮಂಗನಕಾಯಿಲೆ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಮವಾರ ಓರ್ವರಿಗೆ ಸೋಂಕು ದೃಢವಾಗಿದೆ. ಈವರೆಗೆ 65 ಮಂದಿಗೆ ಸೋಂಕು ತಗಲಿದ್ದು, ಈ ಪೈಕಿ 26 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ 12, ಉತ್ತರ ಕನ್ನಡದಲ್ಲಿ 23, ಚಿಕ್ಕಮಗಳೂರು 2 ಸಹಿತ ಒಟ್ಟು 37 ಸಕ್ರಿಯ ಪ್ರಕರಣಗಳಿವೆ.