Advertisement

ಆದಾಯ ಮೀರಿ ಆಸ್ತಿ ಗಳಿಕೆ: ಎಸಿಬಿ ತನಿಖೆಗೆ ಕೋರ್ಟ್‌ ತಡೆ

12:28 PM Apr 12, 2017 | |

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಮಾನತುಗೊಂಡಿರುವ ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕೆ.ಟಿ ನಾಗರಾಜ್‌ ವಿರುದ್ಧದ ಭ್ರಷ್ಟಚಾರ ನಿಗ್ರಹ ದಳದ ತನಿಖೆಗೆ ಹೈಕೋರ್ಟ್‌ ಮಂಗಳವಾರ ತಡೆಯಾಜ್ಞೆ ನೀಡಿದೆ.

Advertisement

ಎಫ್ಐಆರ್‌ ದಾಖಲಿಸುವ ಮುನ್ನವೇ ತಮ್ಮ ನಿವಾಸಗಳ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳ ಕ್ರಮ ತಪ್ಪಾಗಿದೆ. ಈ ನಿಟ್ಟಿನಲ್ಲಿ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದುಗೊಳಿಸುವಂತೆ ಕೋರಿ ಕೆ.ಟಿ.ನಾಗರಾಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ್‌ ಭೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ, ನಾಗರಾಜ್‌ ವಿರುದ್ಧದ ಎಸಿಬಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.

ಕಳೆದ ಫೆ.28ರಂದು ಕೆ.ಟಿ ನಾಗರಾಜ್‌ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, 7.30 ಕೋಟಿ ರೂ. ಮೌಲ್ಯದ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ 5 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆದಾಯ ಮೀರಿದ ಆಸ್ತಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದರು.

ಅಲ್ಲದೆ ಕೆ.ಟಿ ನಾಗರಾಜ್‌ ಮುಖ್ಯ ಎಂಜಿನಿಯರ್‌ ಹುದ್ದೆಯಲ್ಲಿಯೇ ಮುಂದುವರಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು  ಅಮಾನತುಗೊಳಿಸುವಂತೆ ಎಸಿಬಿ ಉನ್ನತ ಅಧಿಕಾರಿಗಳು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದರಂತೆ ಏ.2ರಂದು ನಾಗರಾಜ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next