ಭಾಲ್ಕಿ: ಈ ಭಾಗದ ವಿದ್ಯಾರ್ಥಿಗಳು, ಯುವಕರು ಹೆಚ್ಚೆಚ್ಚು ಕ್ರೀಡೆಗಳಲ್ಲಿ ಪಾಲ್ಗೊಂಡು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ತೋರಬೇಕು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ದಿವ್ಯಜ್ಯೋತಿ ಪ್ರೌಢಶಾಲೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಸಕ್ತ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಪುಸ್ತಕದ ಹುಳು ಆದರೆ ಸಾಲದು. ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದರ ಜತೆಗೆ ದೈಹಿಕವಾಗಿ ಸದೃಢರಾಗಲು ಕ್ರೀಡೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವುದು ಅವಶ್ಯವಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಆರೋಗ್ಯದ ಕಡೆಗೂ ಹೆಚ್ಚು ಆದ್ಯತೆ ನೀಡಬೇಕಾಗಿದೆ. ದೇಶದ ಆಸ್ತಿಯಾಗಿರುವ ವಿದ್ಯಾರ್ಥಿಗಳ ಮೇಲೆ ಬಹು ದೊಡ್ಡ ಜವಾಬ್ದಾರಿಯಿದೆ. ವಿದ್ಯಾಭ್ಯಾಸ, ಕ್ರೀಡೆಗಳಲ್ಲಿ ಭಾಗಹಿಸುವುದರ ಜತೆಗೆ ಪರಿಸರ ಸಂರಕ್ಷಣೆಗೂ ಹೆಚ್ಚು ಆದ್ಯತೆ ನೀಡುವ ಕೆಲಸವಾಗಬೇಕಿದೆ. ಮನುಷ್ಯನ ಭೌತಿಕ ಸುಖಕ್ಕಾಗಿ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದೆ. ಇದರಿಂದ ಗಾಳಿ, ನೀರು, ಆಹಾರದಲ್ಲಿ ಮಾಲಿನ್ಯ ಉಂಟಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇವೆಲ್ಲವನ್ನು ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಮೀರಾಬಾಯಿ ಜನಾರ್ಧನ ಕಣಜೆ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಅಂಬಾದಾಸ್ ಕೋರೆ, ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ನೀಲಕಂಠ ಮದಕಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಅಶೋಕ ಬಾಬು, ದಿವ್ಯಜ್ಯೋತಿ ಶಾಲೆಯ ಸಂಚಾಲಕ ಫಾದರ್ ಕ್ಲೇರಿ ಡಿಸೋಜಾ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜಪ್ಪ ಪಾಟೀಲ್, ರತ್ನದೀಪ ಹುಲಸೂರೆ, ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಕಾಂಬಳೆ, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳ್ಕರ್, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸುಭಾಷ ಹುಲಸೂರೆ, ವಸಂತ ಹುಣಸನಾಳೆ, ನಾಗಭೂಷಣ ಮಾಮಡಿ, ದತ್ತು ಕಾಟಕರ, ಚನ್ನವೀರ ಚಕ್ರಸಾಲಿ, ಸೋಮನಾಥ ಹೊಸಾಳೆ, ಮನೋಹರ ಸಂತಪೂರೆ, ದೈಹಿಕ ಶಿಕ್ಷಣಾಧಿಕಾರಿ ನಾಗನಾಥ ದುಬಲಗುಂಡೆ ಸೇರಿದಂತೆ ಹಲವರು ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರ್ ಸ್ವಾಗತಿಸಿದರು. ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಕಾರಾಮುಂಗೆ ವಂದಿಸಿದರು.