ಬೆಂಗಳೂರು : ಕೇಂದ್ರ ಸರ್ಕಾರದ ನೀತಿ ಖಂಡಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ನೀಡಿದ್ದ ಭಾರತ್ ಬಂದ್ 2 ನೇ ದಿನವೂ ವಿಫಲವಾಗಿದ್ದು, ರಾಜ್ಯಾಧ್ಯಂತ ಕಾರ್ಮಿಕ ಸಂಘಟನೆಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿವೆ.
ಬುಧವಾರ ಬೆಳಗ್ಗೆ ಸಿಐಟಿಯು ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಿ “ರಾಜಭವನ ಚಲೋ’ ಹಮ್ಮಿಕೊಳ್ಳಲಾಗಿತ್ತು. ಆದರೆ ಪೊಲೀಸರು ಮಾರ್ಗ ಬದಲಿಸಿ ರಾಜಭವನದತ್ತ ಪ್ರತಿಭಟನಾ ಕಾರರು ತೆರಳದಂತೆ ತಡೆ ಒಡ್ಡಿದರು.
ಬೆಂಗಳೂರು ನಗರ, ಗ್ರಾಮಾಂತರ ಹಾಗೂ ನೆರೆ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಕಾರ್ಮಿಕ ಸಂಘಟನೆ ಮುಖಂಡರು, ಕಾರ್ಮಿಕರು ಸೇರಿ 10 ಸಾವಿರಕ್ಕೂ ಹೆಚ್ಚು ಮಂದಿ ಪುರಭವನದ ಎದುರು ಪ್ರತಿಭಟನೆ ನಡೆಸಿ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಿದರು.
ಬೆಂಗಳೂರು ನಗರ ಮಾತ್ರವಲ್ಲದೆ, ರಾಜ್ಯದ 30 ಜಿಲ್ಲೆಗಳಲ್ಲಿರುವ ಕಾರ್ಮಿಕ ಸಂಘಟನೆಗಳು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿವೆ.
ಬಳ್ಳಾರಿಯಲ್ಲಿ ರೈಲು ತಡೆಗೆ ಯತ್ನಿಸಿದ ಪ್ರತಿಭಟನಾ ನಿರತ 150 ಕ್ಕೂ ಹೆಚ್ಚು ಮಂದಿ ಕಾರ್ಮಿಕ ಸಂಘಟನೆಯೆ ಹೋರಾಟಗಾರರು ಪೊಲೀಸರ ವಶಕ್ಕೆ ಪಡೆಯಲಾಗಿದೆ.
ರಾಜ್ಯದ ವಿವಿಧೆಡೆ ಪ್ರತಿಭಟನಾ ನಿರತರು ವಾಗ್ವಾದ ನಡೆಸಿದ ಬಗ್ಗೆ ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.