ಬೆಂಗಳೂರು: “ಭಾರತ್ ಜೋಡೋ ಯಾತ್ರೆ’ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು 21 ದಿನಗಳ ಕಾಲ ಕರ್ನಾಟಕದಲ್ಲಿ ತಂಗಲಿದ್ದು, ಈ ಯಾತ್ರೆಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ರೇಸ್ ಕೋರ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾತ್ರೆ ಸಂಬಂಧ ಇಡೀ ದೇಶದ ಜನ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಮಾಡಬೇಕು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಬೇಕು ಎಂದರು.
ಈಗಾಗಲೇ ಪ್ರದೇಶ ಕಾಂಗ್ರೆಸ್ ಸಮಿತಿ ಸ್ವಾತಂತ್ರೊéàತ್ಸವದ ಅಮೃತ ಮಹೋತ್ಸದ ನೆನಪಿಗಾಗಿ ಹಮ್ಮಿಕೊಂಡಿದ್ದ “ಸ್ವಾತಂತ್ರ್ಯ ನಡಿಗೆ’ಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಶಕ್ತಿ ಏನೆಂದು ತೋರಿಸಿದ್ದೀರಿ. ಮೇಕೆದಾಟು ಪಾದಯಾತ್ರೆಯಂತೆ ಈ ಯಾತ್ರೆಯನ್ನೂ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇನೆ. ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಿಕೆ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದರು.
ಆರೆಸ್ಸೆಸ್ ಮುಖಂಡರನ್ನು ಓಲೈಸಿಕೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಕಾರ ನೀಡಿದ್ದ ಪತ್ರಿಕಾ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರ ಭಾವ ಚಿತ್ರ ಕೈಬಿಟ್ಟಿದ್ದರು. ಇತಿಹಾಸ ತಿರುಚುವ ಕೆಲಸಕ್ಕೆ ಬಿಜೆಪಿ ಕೈ ಹಾಕಿದೆ. ಆದರೆ ದೇಶದ ಇತಿಹಾಸದ ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.