ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಅಪರಾಧಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದೆ ಎಂದು ನ್ಯಾಯಧೀಶ ಸುಬ್ರಹ್ಮಣ್ಯ ಜೆ.ಎನ್. ತೀರ್ಪು ಪ್ರಕಟಿಸಿದ್ದಾರೆ.
ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಸದ್ಯ ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಲಭಿಸಿದ್ದರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.
ಘಟನೆ ಹಿನ್ನಲೆ: ಉದ್ಯಮಿ ಭಾಸ್ಕರ್ ಶೆಟ್ಟಿ 2016 ರ ಜುಲೈ 28 ರಂದು ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಮಣಿಪಾಲ ಪೊಲೀಸರು ಅವರ ಪತ್ನಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಭಾಸ್ಕರ್ ಶೆಟ್ಟಿ ಕೊಲೆ ವಿಚಾರ ಬಹಿರಂಗಗೊಂಡಿತ್ತು. ಇದೀಗ ಉಡುಪಿ ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿ ತೀರ್ಪು ನೀಡಿದೆ.
ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.