ಬೀದರ: ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ಜೂ.27ರಂದು ನಡೆಯಲಿರುವ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ| ಎಚ್.ಆರ್.ಮಹಾದೇವ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು, ಅಧಿಕಾರಿಗಳು ತಮ್ಮ ಇಲಾಖೆಯಿಂದ ಪ್ರಮುಖ ಬೇಡಿಕೆಗಳ ಪಟ್ಟಿ ಸಿದ್ಧಪಡಿಸಿಕೊಂಡು ಸಲ್ಲಿಸಬೇಕು. ಎಲ್ಲ ಇಲಾಖೆಗಳ ಬೇಡಿಕೆಗಳನ್ನು ಕ್ರೋಢೀಕರಿಸಿ, ಮಾಹಿತಿಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದೆಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ ಮಾತನಾಡಿ, ಬಸವಕಲ್ಯಾಣ ತಾಲೂಕಿನ ಕೋಹಿನೂರಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ. ಜಿಲ್ಲಾಡಳಿತದಿಂದ ನಿವೇಶನ ದೊರೆತಿದ್ದು, ಅನುದಾನ ಕೊರತೆಯಿಂದ ಕಟ್ಟಡ ಕಾಮಗಾರಿ ಆರಂಭಗೊಂಡಿಲ್ಲ. ಹೊಸದಾಗಿ ರಚನೆಗೊಂಡ ತಾಲೂಕುಗಳಲ್ಲಿ ವಸತಿ ನಿಲಯಗಳನ್ನು ಸ್ಥಾಪಿಸುವ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಡಿ.ದೇವರಾಜ ಅರಸ ಅಭಿವೃದ್ಧಿ ನಿಗಮ, ಡಾ| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಅಗ್ನಿಶಾಮಕ ದಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಂದ ಮುಖ್ಯಮಂತ್ರಿಯವರಿಗೆ ಸಲ್ಲಿಸಬಹುದಾದ ಬೇಡಿಕೆಗಳ ಬಗ್ಗೆ ವಿವರಣೆ ಪಡೆದರು.
ಅಧಿಕಾರಿಗಳು ಕ್ರಿಯಾಶೀಲವಾಗಿ ಯೋಚಿಸಿ ತಮ್ಮ ಇಲಾಖೆಯಿಂದ ಜನತೆಯ ಏಳ್ಗೆ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾಮಗಾರಿಗಳು, ಪ್ರಮುಖ ಬೇಡಿಕೆಗಳ ಬಗ್ಗೆ ಅಂದಾಜು ವೆಚ್ಚದ ವಿವರದೊಂದಿಗೆ ಮಾಹಿತಿ ನೀಡಬೇಕು. ಅಲ್ಲದೇ ಕಾರ್ಯಕ್ರಮ ದಿನದಂದು ಎಲ್ಲ ಅಧಿಕಾರಿಗಳು ಸ್ಥಳದಲ್ಲಿ ಹಾಜರಿರಬೇಕು. ಜನತಾದರ್ಶನ ಕಾರ್ಯಕ್ರಮದಲ್ಲಿ ಜನರು ಅಹವಾಲು ಸಲ್ಲಿಸುವ ವೇಳೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಉತ್ತರ ನೀಡಲು ಸಿದ್ಧರಿರಬೇಕೆಂದು ತಿಳಿಸಿದರು.
ಜನತಾದರ್ಶನ ಕಾರ್ಯಕ್ರಮಕ್ಕೆ ಬರುವ ಜನರಿಂದ ದೂರು ಅರ್ಜಿಗಳನ್ನು ಪಡೆಯಲು ಕಂಪ್ಯೂಟರ್ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಳೆ ಬಂದರೂ ಸಹ ಕಾರ್ಯಕ್ರಮಕ್ಕೆ ಯಾವುದೇ ಅಡೆಗಡೆ ಉಂಟಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಶಂಕರ ವಣಕ್ಯಾಳ ಅವರಿಗೆ ನಿರ್ದೇಶನ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಯೋಜನೆಗೊಂಡ ಕಲಾವಿದರನ್ನು ಕಾರ್ಯಕ್ರಮಕ್ಕೆ ಕರೆದೊಯ್ಯಲು ವಾಹನ ವ್ಯವಸ್ಥೆ ಕಲ್ಪಿಸಬೇಕು. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವವರಿಗೆ ಪ್ರತ್ಯೇಕ ಗುರುತಿನ ಚೀಟಿಗಳನ್ನು ವಿತರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.