ಬೀದರ: ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಜಿಲ್ಲೆಯ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.
ನಗರದ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ 2018-19ನೇ ಸಾಲಿನಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶೇ.100 ಫಲಿತಾಂಶ ಪಡೆದ ಶಾಲೆಯ ಮುಖ್ಯ ಗುರುಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಸಂಸ್ಕಾರಗಳನ್ನು ನೀಡಬೇಕು. ವಿದ್ಯಾರ್ಥಿಗಳು ಕೂಡ ಉತ್ತಮ ಓದಿನಿಂದ ಭವಿಷ್ಯ ರೂಪಿಸಿಕೊಳ್ಳುವ ಜತೆಗೆ ಜಿಲ್ಲೆಯ ಪ್ರಗತಿಗೆ ಶ್ರಮಿಸಬೇಕು. ಪ್ರಸಕ್ತ ಸಾಲಿನಲ್ಲಿ ಕೊನೆಯ ಸ್ಥಾನದಿಂದ ಮೇಲೆ ಬಂದಿದ್ದು, ಮುಂದಿನ ವರ್ಷದಲ್ಲಿ ಇನ್ನೂ ಹೆಚ್ಚಿನ ಫಲಿತಾಂಶ ಬರುವಂತೆ ನೋಡಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ ಸುಮಾರು 400 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೂ ಸುಮಾರು 29 ವಿವಿಧ ಪ್ರೌಢಶಾಲೆಗಳ ಮುಖ್ಯ ಗುರುಗಳನ್ನು ಕೂಡ ಸನ್ಮಾನಿಸಲಾಯಿತು. ಸಂಸದ ಭಗವಂತ ಖೂಬಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜ್ಯೋತಿರ್ಮಯಾನಂದ ಸ್ವಾಮೀಜಿ, ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ ಖದೀರ, ಮುಖ್ಯೋಪಾಧ್ಯಾಯರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎನ್. ಚಂದ್ರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ. ಪತ್ತಾರ, ವಿಜಯಕುಮಾರ ಪಾಟೀಲ, ಜಿಲ್ಲಾಧ್ಯಕ್ಷ ಪ್ರಶಾಂತ ರಾಗಾ, ಜಿಲ್ಲಾ ಕಾರ್ಯದರ್ಶಿ ಸಿದ್ರಾಮ ನಿಜಾಂಪೂರೆ, ಗೌರವಾಧ್ಯಕ್ಷ ಪ್ರಕಾಶ ಲಕಶೆಟ್ಟಿ, ಪರಮೇಶ್ವರ ಬಿರಾದಾರ, ದೇವಿದಾಸ ಜೋಷಿ, ಸೈಯದ ಸಲಾವೊದ್ದೀನ್ ಇತರರು ಇದ್ದರು.