ಬೀದರ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ಜೂನ್ 29ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬಸವಕಲ್ಯಾಣದಲ್ಲಿ ಕೂಡ ಸಾರ್ವಜನಿಕರ ಅಹವಾಲು ಆಲಿಸಲಿದ್ದಾರೆ. ಈ ಸಂಬಂಧ ಅಧಿಕಾರಿಗಳು ಅಲ್ಲದೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಗಾಗಲೇ ಆ ಗ್ರಾಮಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಬೀದರ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮ ನಿಗದಿಯಾದ ಹಿನ್ನೆಲೆಯಲ್ಲಿ ಇದಕ್ಕೆ ಪೂರ್ವಬಾವಿಯಾಗಿ ಎಲ್ಲಾ ತಾಲೂಕುಗಳ ತಹಶೀಲ್ದಾರರು ಮತ್ತು ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಆಯಾ ತಾಲೂಕುಗಳ ಎಲ್ಲಾ ಹಳ್ಳಿಗಳಲ್ಲಿ ಡಂಗುರ ಹೊಡೆಸಿ, ಸಮಸ್ಯೆಗಳಿದ್ದರೆ ಅವುಗಳನ್ನು ಜನರಿಂದ ಕೇಳಿ, ಅವರಿಂದ ಅರ್ಜಿ ಸ್ವೀಕರಿಸಿ, ಅದಕ್ಕಾಗಿ ಒಂದು ಪ್ರತ್ಯೇಕ ಸಮಿತಿ ಇಟ್ಟು ಬೇಡಿಕೆ ಈಡೇರಿಕೆಗೆ ಒತ್ತು ಕೊಡಬೇಕು ಎಂದು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ತಹಶೀಲ್ದಾರ್‌ರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಿಎಂ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಉಜಳಂಬ ಗ್ರಾಮಸ್ಥರ ಕೆಲವೊಂದು ಬೇಡಿಕೆಗಳಿಗೆ ಕೂಡಲೇ ಪರಿಹಾರ ಕಲ್ಪಿಸಬೇಕು. ಗ್ರಾಮಸ್ಥರ ಬೇಡಿಕೆಯಂತೆ ಆ ಗ್ರಾಮದಲ್ಲಿ ಪ್ರತಿದಿನ ನಾಲ್ಕೈದು ಬಾರಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಗ್ರಾಮಕ್ಕೆ ಹೊರಡುವ ರಸ್ತೆಗಳು ಅಚ್ಚುಕಟ್ಟಾಗಿ ಸಿದ್ಧಗೊಳ್ಳಬೇಕು. ಗ್ರಾಮದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಉಜಳಂಬ ಗ್ರಾಮದಲ್ಲಿ ಈಗಿರುವ ವೈದ್ಯರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎನ್ನುವ ದೂರುಗಳಿದ್ದು, ಅವರನ್ನು ಕೂಡಲೇ ಬೇರೆಕಡೆ ವರ್ಗಾವಣೆ ಮಾಡಬೇಕು. ಸರಿಯಾಗಿ ಕಾರ್ಯ ನಿರ್ವಹಿಸುವ ವೈದ್ಯರನ್ನು ಕೂಡಲೇ ಅಲ್ಲಿ ನಿಯೋಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
ಉಜಳಂಬ ಗ್ರಾಮದಲ್ಲಿ ವಸತಿ ಶಾಲೆ, ರೈತ ಸಂಪರ್ಕ ಸಂಪರ್ಕ ಕೇಂದ್ರ ತೆರೆಯಬೇಕು. ಪೊಲೀಸ್ ಠಾಣೆ, ಬ್ಯಾಂಕ್ ಶಾಖೆ ಆರಂಭಿಸಬೇಕು. ಗ್ರಾಮದ ಹಳೆಯ ಕೆರೆಯನ್ನು ಪುನಶ್ಚೇತನಗೊಳಿಸಬೇಕು. ಗ್ರಾಮದಲ್ಲಿ ಹೊಸ ಕೆರೆ ನಿರ್ಮಿಸಬೇಕು. ಆರೋಗ್ಯ ಕೇಂದ್ರದಲ್ಲಿನ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂಬುದು ಉಜಳಂಬ ಗ್ರಾಮಸ್ಥರು ಬೇಡಿಕೆ ಮುಂದಿಟ್ಟಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು. ಆಯಾ ಬೇಡಿಕೆಗಳ ಬಗ್ಗೆ ಮೊದಲು ಸರಿಯಾಗಿ ಅಧ್ಯಯನ ಮಾಡಿ, ಗ್ರಾಮಕ್ಕೆ ಅಗತ್ಯ ಸೌಕರ್ಯ ಕಲ್ಪಿಸುವ ಸಂಬಂಧ ಕೂಡಲೇ ಪ್ರಸ್ತಾವನೆ ಸಿದ್ಧಪಡಿಸಿ ನಮಗೆ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.