ಬೀದರ: ಅಂಗನವಾಡಿ, ವಸತಿ ನಿಲಯಗಳಲ್ಲಿ ಗುಣಮಟ್ಟದ ಮತ್ತು ಸಮರ್ಪಕ ರೀತಿಯಲ್ಲಿ ಆಹಾರ ಪೂರೈಕೆಯಾಗುತ್ತಿಲ್ಲ ಎಂದು ಯಾರೂ ಕೂಡ ದೂರುವಂತಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಗಮನ ಹರಿಸಿ ಕಾಳಜಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜೂನ್ 20ರಂದು ನಡೆದಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಮುಂದುವರೆದ ಸಭೆಯಲ್ಲಿ ಅವರು ಈ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳಿಂದ ನಡೆಯುವ ವಸತಿ ನಿಲಯಗಳಿಗೆ, ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿರುವ ಆಹಾರದ ಗುಣಮಟ್ಟ, ಆಹಾರ ವಸ್ತುಗಳ ಪೂರೈಕೆ ಮತ್ತು ವಿವಿಧ ಇಲಾಖೆಗಳಲ್ಲಿ ನಡೆಯುವ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ, ಪರಿಗಣಿಸುವ ಮಾನದಂಡಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಸಲಾಯಿತು. ಬಳಿಕ ಆಹಾರ ವಸ್ತುಗಳು ಮತ್ತು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ವರದಿ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸದಸ್ಯರನ್ನೊಳಗೊಂಡು ಸದನ ಸಮಿತಿಯೊಂದು ರಚನೆಯಾಗಬೇಕು ಎಂದು ನಿರ್ಣಯಿಸಲಾಯಿತು.
ಸಮಿತಿ ಸದಸ್ಯರು ಎಲ್ಲ ವಸತಿ ನಿಲಯಗಳಿಗೆ ಮತ್ತು ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಇದೇ ವೇಳೆ ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಚಿದ್ರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಸದನ ಸಮಿತಿಯು ಬಯಸುವ ಅಧಿಕಾರಿಗಳು ಮತ್ತು ಎಂಜಿನಿಯರುಗಳನ್ನು ನಿಯೋಜನೆ ಮಾಡಲಾಗುವುದು ಎಂದು ಸದಸ್ಯರಿಗೆ ತಿಳಿಸಿದರು.
ಪ್ರತಿನಿತ್ಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಪೂರೈಸುವ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ಮಾಡುವ ಸಾರ್ವಜನಿಕ ಶಿಕ್ಷಣ ಇಲಾಖೆ, ಅಂಗನವಾಡಿಗಳಿಗೆ ಆಹಾರ ಪೂರೈಕೆ ಮಾಡುವ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಕೃಷಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಆಹಾರ ವಸ್ತುಗಳ ಪೂರೈಕೆ ಮತ್ತು ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಮಗ್ರ ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಇದೇ ವೇಳೆ ಸಿಇಒ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇತ್ತೀಚೆಗೆ ಬರಗಾಲದಿಂದಾಗಿ ನೀರಾವರಿ, ತೋಟಗಾರಿಕಾ ಪ್ರದೇಶದ ವಿಸ್ತೀರ್ಣ ಕಡಿಮೆಯಾಗುತ್ತ ಸಾಗಿದೆ. ಈ ಬಗ್ಗೆ ತಾವು ಗಮನ ಹರಿಸಬೇಕು. ನೀರಾವರಿ ಮತ್ತು ತೋಟಗಾರಿಕೆ ಮಾಡಲು ಆಸಕ್ತಿ ಇರುವ ರೈತರನ್ನು ಗುರುತಿಸಿ, ಅವರಿಗೆ ಹುರಿದುಂಬಿಸಿ ನೀರಾವರಿ ತೋಟಗಾರಿಕೆಗೆ ಅವಕಾಶ ಕಲ್ಪಿಸಬೇಕು. ಈಗಾಗಲೇ ತೋಟಗಾರಿಕೆ ಮಾಡುತ್ತಿರುವ ರೈತರಿಗೆ ಹೊಸ ಹೊಸ ತಾಂತ್ರಿಕ ವಿಧಾನಗಳನ್ನು ತಿಳಿಸಬೇಕು ಎಂದು ಸಿಇಒ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ಜಿಪಂ ಉಪಾಧ್ಯಕ್ಷ ಲಕ್ಷ್ಮಣ ಬುಳ್ಳಾ, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.