ಬೀದರ: ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಮೇ 25, 26 ಹಾಗೂ ಜೂನ್ 1 ಮತ್ತು 2ರಂದು ನಡೆಯಲಿರುವ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ತಪಾಸಣೆಗೆ ಪುರುಷ ಹಾಗೂ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಮೊಬೈಲ್ ಫೋನ್‌ಗಳನ್ನು ಪರೀಕ್ಷಾ ಕೋಣೆಯಲ್ಲಿ ಕೊಂಡೊಯ್ಯದಂತೆ ವ್ಯವಸ್ಥೆ ಮಾಡಬೇಕು. ಪರೀಕ್ಷೆಯ ಎಲ್ಲಾ ವಿವರಗಳನ್ನು ವಿಡಿಯೋಗ್ರಾಫಿ ಮಾಡಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಶ್ನೆ ಪತ್ರಿಕೆಗಳನ್ನು ತಲುಪಿಸುವ ವಾಹನಗಳಿಗೆ ಪೊಲೀಸ್ ಸಿಬ್ಬಂದಿಯನ್ನು ಒದಗಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಜಿಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಅಗತ್ಯವಿರುವಷ್ಟು ಪೊಲೀಸ್ ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಪರೀಕ್ಷೆಗೆ ನಿಯೋಜನೆಗೊಂಡಿರುವ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ಚಿಚಾರಕರಿಗೆ ಅವರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಮನವರಿಕೆ ಮಾಡಿಸಬೇಕು ಎಂದು ನಿರ್ದೇಶನ ನೀಡಿದರು.
ಪರೀಕ್ಷಾ ನೋಡಲ್ ಅಧಿಕಾರಿ ಶಿವಕುಮಾರ ಸ್ವಾಮಿ ಮಾತನಾಡಿ, ಕೊಠಡಿ ಮೇಲ್ವಿಚಾರಕರು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ನಿಗದಿಪಡಿಸಿದ ಕೊಠಡಿ, ಹಾಜರಿರಬೇಕಾದ ಅಭ್ಯರ್ಥಿಗಳ ಸಂಖ್ಯೆ, ನೋಂದಣಿ ಸಂಖ್ಯೆ ಸರಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಯ ಪ್ಯಾಕೆಟ್ ತೆರೆಯುವ ಮುನ್ನ ಸರಿಯಾಗಿ ಸೀಲ್ ಮಾಡಲಾಗಿದೆಯೇ ಎಂಬುದನ್ನು ಗಮನಿಸಬೇಕು. ಅಭ್ಯರ್ಥಿಗಳಿಗೆ ಒಎಂಆರ್ ಉತ್ತರ ಪತ್ರಿಕೆಯ ಕ್ರಮ ಸಂಖ್ಯೆ, ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಒಂದೇ ಆಗಿದೆಯೇ ಎನ್ನುವುದನ್ನು ಪರಿಶೀಲಿಸಿ ಇಲ್ಲದಿದ್ದಲ್ಲಿ ಸರಿಯಾಗಿ ಇರುವುದನ್ನು ಪಡೆಯುವಂತೆ ತಿಳಿಸಬೇಕು ಎಂದು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ವಿಠೊಭಾ ಪತ್ತಾರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.